ಬೆಂಗಳೂರು, ಜೂ.21 (DaijiworldNews/HR): ಕೊರೊನಾದಿಂದಾಗಿ ಶಾಲಾ ಕಾಲೇಜು ತರಗತಿಗಳು ಆನ್ಲೈನ್ ಮೂಲಕ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ನೆಟ್ ವರ್ಕ್ ಸಮಸ್ಯೆಯಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು, ಮೊಬೈಲ್ ನೆಟ್ ವರ್ಕ್ ಸಮಸ್ಯೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು" ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ಸಚಿವರು ಮುಖ್ಯಮಂತ್ರಿಯವರಿಗೆ ಬರೆದ ಪತ್ರದಲ್ಲಿ, "ಗ್ರಾಮೀಣ ಪ್ರದೇಶದಲ್ಲಿ ನೆಟ್ ವರ್ಕ್ ದೊರೆಯದೇ ಗ್ರಾಮೀಣ ಪ್ರದೇಶದ ಮಕ್ಕಳು ಬೆಟ್ಟ ಗುಡ್ಡಗಳನ್ನು ಹತ್ತಿ ಕುಳಿತು ಆನ್-ಲೈನ್ ತರಗತಿಗಳಿಗೆ ಹಾಜರಾಗುತ್ತಿದ್ದು, ಮಳೆಗಾಲವಾದ್ದರಿಂದ ಬೆಟ್ಟದ ಮೇಲೆ ಕುಳಿತು ಪಾಠದಲ್ಲಿ ತೊಡಗಿಸಿಕೊಂಡ ಮಕ್ಕಳನ್ನು ಮಳೆಯಿಂದ ರಕ್ಷಿಸಲು ಪೋಷಕರು ಛತ್ರಿ ಹಿಡಿದು ಮಳೆಯಲ್ಲಿ ನಿಂತುಕೊಂಡ ಫೋಟೋಗಳು ಪತ್ರಿಕೆಗಳಲ್ಲಿ ಮತ್ತು ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ನೆಟ್-ವರ್ಕ್ ಸಮಸ್ಯೆಗೆ ಕೊನೆ ಹಾಡಲು ನೆಟ್-ವರ್ಕ್ ಆಪರೇಟರ್ಗಳ ಸಭೆ ನಡೆಸಿ ಪರಿಹಾರ ರೂಪಿಸಬೇಕು" ಎಂದು ಮನವಿ ಮಾಡಿದ್ದಾರೆ.
ಇನ್ನು ಕೊರೊನಾದ ಸಮಯದಲ್ಲಿ ಆನ್ ಲೈನ್ ತರಗತಿಗಳೇ ಸಾಮಾನ್ಯವಾಗಬಹುದಾಗಿದ್ದು, ಕೊರೊನಾ ಪೂರ್ವದ ಸಹಜ ಸಾಮಾಜಿಕ ಸ್ಥಿತಿಗತಿಗಳು ಸದ್ಯಕ್ಕೆ ಹಿಂದಿರುಗಲು ಸಾಧ್ಯವಿಲ್ಲವೆಂಬುದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದ್ದು, ಈ ಹೊಸ ಸ್ಥಿತಿಗೆ ಹೊಂದಿಕೊಳ್ಳದೇ ಅನ್ಯದಾರಿಯಿಲ್ಲವಾದ್ದರಿಂದ ನಾವು ಅಂತರ್ಜಾಲ ನೆಟ್-ವರ್ಕ್ ಸಮಸ್ಯೆಯನ್ನು ಪರಿರಿಸಿಕೊಳ್ಳಲೇಬೇಕಿದೆ" ಎಂದಿದ್ದಾರೆ.
ಆನ್ ಲೈನ್ ಶಿಕ್ಷಣ ಅನಿವಾರ್ಯವಾಗುತ್ತಿರುವ ಈ ದಿನಗಳಲ್ಲಿ ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಎಲ್ಲ ನೆಟ್ ವರ್ಕ್ ಆಪರೇಟರ್ ಗಳ ಸಭೆಯನ್ನು ಶೀಘ್ರವೇ ಆಯೋಜಿಸಿ ಸಮರೋಪಾದಿಯಲ್ಲಿ ನೆಟ್-ವರ್ಕ್ ಸಮಸ್ಯೆಯನ್ನು ಇತ್ಯರ್ಥಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಸುರೇಶ್ ಕುಮಾರ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.