ಬೆಂಗಳೂರು,ಜೂ.22 (DaijiworldNews/HR): ಕೊರೊನಾದ ಮೂರನೇ ಅಲೆಯನ್ನು ತಡೆಗಟ್ಟುವುದಕ್ಕೆ ಯಾವೆಲ್ಲಾ ಕ್ರಮ ಕೈಗೊಳ್ಳಬೇಕು ಎಂದು ಉನ್ನತ ಮಟ್ಟದ ನುರಿತ ತಜ್ಞರ ಸಮಿತಿ ಅಧ್ಯಕ್ಷ ಡಾ.ದೇವಿ ಪ್ರಸಾದ್ ಶೆಟ್ಟಿ ಹಾಗೂ ಇತರ ಸದಸ್ಯರು ಸಭೆ ನಡೆಸಿ, ಕರ್ನಾಟಕ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದ್ದಾರೆ.
ಸಾಂಧರ್ಭಿಕ ಚಿತ್ರ
ಇದರ ಪ್ರಕಾರ ಸರ್ಕಾರಕ್ಕೆ ಕೆಲವು ಸಲಹೆಗಳನ್ನು ನೀಡಲಾಗಿದ್ದು, ಮಕ್ಕಳನ್ನು ಮೂರನೇ ಅಲೆಯಿಂದ ರಕ್ಷಿಸಲು ಏನು ಮಾಡಬೇಕು? ಶಾಲೆ ಪುನರಾಂರಂಭಿಸುವುದಾದರೆ ಯಾವೆಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು? ಎನ್ನುವುದನ್ನು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕದಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಬೇಕೆಂಬುದು ತಜ್ಞರ ಸಲಹೆಯಾಗಿದ್ದು, ಮೊದಲ ಹಂತದಲ್ಲಿ ಕಾಲೇಜುಗಳನ್ನು ಆರಂಭಿಸುವುದು, ಎರಡನೇ ಹಂತದಲ್ಲಿ 8ರಿಂದ 10ನೇ ತರಗತಿಗೆ ಶಾಲೆ ಆರಂಭಿಸುವುದು ಹಾಗೂ ಮೂರನೇ ಹಂತದಲ್ಲಿ 5ರಿಂದ 7ನೇ ತರಗತಿಗಳನ್ನು ಆರಂಭಿಸುವುದು ಸೂಕ್ತ ಎಂದು ತಜ್ಞರು ತಿಳಿಸಿದ್ದಾರೆ.
ಇನ್ನು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವೇ ಮಾಸ್ಕ್ ವಿತರಿಸಬೇಕು. ಶಾಲೆಗಳಲ್ಲಿ ಮಕ್ಕಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಶಿಕ್ಷಕರು, ಶಾಲೆಯ ಇತರೆ ಸಿಬ್ಬಂದಿಗೆ ಕಡ್ಡಾಯವಾಗಿ ಕೊರೊನಾ ಲಸಿಕೆ ಹಾಕಿಸಿರಬೇಕು. ಆರೋಗ್ಯವಂತ ಮಕ್ಕಳು ಮಾತ್ರ ಶಾಲೆಗೆ ಬರುವಂತೆ ನೋಡಿಕೊಳ್ಳಬೇಕು. ಶಾಲಾ ಆವರಣಕ್ಕೆ ಹೊರಗಿನವರು ಬರುವುದಕ್ಕೆ ಪ್ರವೇಶ ನಿರ್ಬಂಧ ಹೇರಬೇಕು. ವಾರಕ್ಕೊಮ್ಮೆ ಸ್ಥಳೀಯ ವೈದ್ಯರಿಂದ ಆರೋಗ್ಯ ತಪಾಸಣೆ ಮಾಡಿಸಬೇಕು. ಮಕ್ಕಳಿಗೆ ಕರ್ನಾಟಕ ಸರ್ಕಾರವೇ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಟ ಆಡಿಸಿ, ಮಕ್ಕಳಿಗೆ ಸರ್ಕಾರದಿಂದ ಪೌಷ್ಟಿಕಾಂಶಯುಕ್ತ ಆಹಾರ ನೀಡಬೇಕು" ಎಂದು ಸಲಹೆ ನೀಡಿದ್ದಾರೆ.
ಒತ್ತಾಯ ಪೋರ್ವಕವಾಗಿ ಶಾಲೆಗೆ ಮಕ್ಕಳನ್ನು ಕರೆಸಿಕೊಳ್ಳುವಂತಿಲ್ಲ, ಪೋಷಕರು ಸಮ್ಮತಿಸಿದರೆ ಮಾತ್ರ ಮಕ್ಕಳನ್ನ ಶಾಲೆಗೆ ಕರೆತರಬೇಕು. ಮಕ್ಕಳ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ. ಆನ್ಲೈನ್, ಆಫ್ಲೈನ್ 2 ಮಾದರಿಯ ಕಲಿಕೆಗೂ ಅವಕಾಶ ನೀಡಬೇಕು ಎನ್ನುವುದನ್ನೂ ತಜ್ಞರು ಪ್ರತಿಪಾದಿಸಿದ್ದಾರೆ.
ಇನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಡಾ.ದೇವಿಪ್ರಸಾದ್ ಶೆಟ್ಟಿ ವರದಿ ಸಲ್ಲಿಕೆ ಮಾಡಲಾಗಿದ್ದು, ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಿಕೊಂಡು ಶಾಲಾ,ಕಾಲೇಜು ಆರಂಭಿಸುವುದು ಹೇಗೆ ಎಂಬ ಬಗ್ಗೆ ತಿಳಿಸಲಾಗಿದೆ.