ನವದೆಹಲಿ, ಜೂ.25 (DaijiworldNews/HR): ಒಂದು ಕುಟುಂಬದ ವಿರುದ್ಧದ ಧ್ವನಿಯನ್ನು ದಮನಗೊಳಿಸುವ ಹಿನ್ನಲೆಯಲ್ಲಿ ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದು, ಇದು ಸ್ವತಂತ್ರ ಭಾರತದ ಇತಿಹಾಸದಲ್ಲಿ ಒಂದು ಕರಾಳ ಅಧ್ಯಾಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, "ಭಾರತದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ರಾಷ್ಟ್ರ ಎಂದಿಗೂ ಮರೆಯುವುದಿಲ್ಲ" ಎಂದಿದ್ದಾರೆ.
"ನಾವು ಭಾರತದ ಪ್ರಜಾಪ್ರಭುತ್ವದ ಆಶಯವನ್ನು ಬಲಪಡಿಸಲು ಮತ್ತು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೌಲ್ಯಗಳಿಗೆ ತಕ್ಕಂತೆ ಬದುಕಲು ಸಾಧ್ಯವಿರುವ ಎಲ್ಲವನ್ನೂ ಸಾಧ್ಯವಾಗಿಸಲು ಒಗ್ಗಟ್ಟಿನಿಂದ ಶ್ರಮಿಸಬೇಕು" ಎಂದು ಹೇಳಿದ್ದಾರೆ.
ಇನ್ನು ಪ್ರಧಾನಿ ಇಂದಿರಾಗಾಂಧಿ 1975ರಿಂದ 1977ರವರೆಗೆ 21 ತಿಂಗಳ ಅವಧಿ ಕಾಲ ತುರ್ತು ಪರಿಸ್ಥಿತಿ ಘೋಷಿಸಿದ್ದರು. ಆಂತರಿಕ ಸಮಸ್ಯೆಯನ್ನು ನಿಯಂತ್ರಣದಲ್ಲಿಡುವ ನಿಟ್ಟಿನಲ್ಲಿ ಅಂದಿನ ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹ್ಮದ್ ಅವರು ಸಂವಿಧಾನದ 352ನೇ ವಿಧಿ ಅನ್ವಯ ಅಧಿಕೃತವಾಗಿ ತುರ್ತು ಪರಿಸ್ಥಿತಿ ಘೋಷಿಸಿದ್ದು, 1975ರ ಜೂನ್ 25ರಿಂದ 1977ರ ಮಾರ್ಚ್ 21ರಂದು ಆದೇಶ ಹಿಂಪಡೆಯುವವರೆಗೂ ಜಾರಿಯಲ್ಲಿತ್ತು ಎಂದು ವರದಿ ವಿವರಿಸಿದೆ.