ಬೆಂಗಳೂರು, ಜೂ 27 (DaijiworldNews/PY): "ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗದಂತ ಮಹಾರಾಷ್ಟ್ರ ಹಾಗೂ ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ" ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಸೋಕು ಇಬ್ಬರಿಗೆ ದೃಢಪಟ್ಟಿದೆ. ಈ ಹಿನ್ನೆಲೆ ಈಗಾಗಲೇ 600ಕ್ಕೂ ಅಧಿಕ ಸ್ಯಾಂಪಲ್ಸ್ಗಳನ್ನು ಸಂಗ್ರಹಿಸಲಾಗಿದ್ದು, ಅವುಗಳನ್ನು ಜಿನೋಮಿಕ್ ಸ್ವೀಕ್ಸಿಂಗ್ ಟೆಸ್ಟ್ಗೆ ಕಳುಹಿಸಲಾಗಿದೆ. ಇಂದು ಅದರ ವರದಿ ಬರಲಿದೆ" ಎಂದಿದ್ದಾರೆ.
"ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಸೋಂಕಿನ ಪ್ರಕರಣಗಳು ಹೆಚ್ಚು ಪತ್ತೆಯಾಗುತ್ತಿರುವ ಹಿನ್ನೆಲೆ ಮಹಾರಾಷ್ಟ್ರ ಹಾಗೂ ಕೇರಳ ಗಡಿ ಭಾಗದಲ್ಲಿ ಹೆಚ್ಚು ನಿಗಾವಹಿಸಲಾಗಿದ್ದು, ಅಲ್ಲಿನ ಜಿಲ್ಲಾಡಳಿತಕ್ಕೂ ಕೂಡಾ ಸೂಚನೆ ನೀಡಲಾಗಿದೆ. ಎರಡು ಡೋಸ್ ಲಸಿಕೆ ಪೂರ್ಣವಾಗುವವರೆಗೂ ಜನರು ಎಚ್ಚರಿಕೆ ವಹಿಸಬೇಕು. ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಗತ್ಯ" ಎಂದು ತಿಳಿಸಿದ್ದಾರೆ.
"ಮಧ್ಯಪ್ರದೇಶ, ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಆತಂಕವಿಲ್ಲ. ಮುಂಜಾಗ್ರತಾ ಕ್ರಮವಾಗಿ ಮಹಾರಾಷ್ಟ್ರ, ಕೇರಳದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕೊರೊನಾ ನೆಗೆಟಿವ್ ವರದಿಯನ್ನು ಕಡ್ಡಾಯ ಮಾಡಲಾಗಿದೆ. ಮಹಾರಾಷ್ಟ್ರ ಹಾಗೂ ಕೇರಳದಿಂದ ರಾಜ್ಯಕ್ಕೆ ಬರುವವರಿಗೆ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ" ಎಂದಿದ್ದಾರೆ.