ಬೆಂಗಳೂರು, ಜೂ. 27 (DaijiworldNews/SM): ಕೋವಿಡ್ ಹೊಸ ವೈರಾಣು ನಿಯಂತ್ರಣಕ್ಕೆ ರಾಜ್ಯದಲ್ಲಿ ಸಕಲ ಸಿದ್ಧತೆ ನಡೆಸಲಾಗಿದೆ. ಜೀನೋಮ್ ಸೀಕ್ವೆನ್ಸ್ ಪರೀಕ್ಷೆ ನಡೆಸಿ ವೈರಾಣು ಪತ್ತೆ ಕಾರ್ಯ ನಡೆಸಲಾಗುತ್ತಿದ್ದು, 600 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಲ್ಟಾ ಪ್ಲಸ್ ವೈರಾಣು ಸೋಂಕಿನ ಇಬ್ಬರು ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನೂ 600 ಮಾದರಿಗಳನ್ನು ಜಿನೋಮ್ ಸೀಕ್ವೆನ್ಸ್ ಗೆ ಕಳುಹಿಸಲಾಗಿದೆ. ಶೀಘ್ರದಲ್ಲೇ ಇದರ ವರದಿ ಕೂಡ ಲಭ್ಯವಾಗಲಿದೆ. ನಮ್ಮಲ್ಲಿ ಡೆಲ್ಟಾ ಪ್ಲಸ್ ಹೆಚ್ಚಿನ ಆತಂಕವನ್ನು ತಂದುಕೊಂಡಿಲ್ಲ. ಆದರೆ ಮಹಾರಾಷ್ಟ್ರ ಮತ್ತು ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ವಿಶೇಷ ನಿಗಾ ವಹಿಸಲಾಗುತ್ತಿದೆ. ರಾಜ್ಯಕ್ಕೆ ಆಗಮಿಸುವವರಿಗೆ ರ್ಯಾಂಡಮ್ ಪರೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ 50 ಲಕ್ಷಕ್ಕೂ ಅಧಿಕ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ದೇಶದ ಯಾವುದೇ ನಗರದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕೆ ನೀಡಿಲ್ಲ. ಇದು ದಾಖಲೆ ಎಂದು ಸಚಿವರು ತಿಳಿಸಿದ್ದಾರೆ.