ಬೆಂಗಳೂರು, ಜೂ 30 (DaijiworldNews/PY): "ಕೊರೊನಾದಿಂದ ಸಾವಿಗೀಡಾದ ಒಬ್ಬ ವ್ಯಕ್ತಿಗೆ ಮಾತ್ರ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವ ಬಿಜೆಪಿ ಸರ್ಕಾರದ ನಿರ್ಧಾರ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯ ನಿಯಮಗಳಿಗೆ ವಿರುದ್ಧವಾಗಿದೆ ಎಂಬ ನಮ್ಮ ವಾದಕ್ಕೆ ಸುಪ್ರೀಂ ಕೋರ್ಟ್ ಸಹಮತ ವ್ಯಕ್ತಪಡಿಸಿರುವುದು ಸ್ವಾಗತಾರ್ಹ" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, "ಕೊರೊನಾದಿಂದ ಮೃತರಾದ ವ್ಯಕ್ತಿಗಳ ಕುಟುಂಬಕ್ಕೆ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯ ನಿಯಮದಂತೆ ಪರಿಹಾರ ನೀಡಬೇಕೆಂಬ ನಮ್ಮ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದರೂ ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ. ಈಗಲಾದರೂ ಕೇಂದ್ರ ಮತ್ತು ರಾಜ್ಯಸರ್ಕಾರ ಮಾನವೀಯತೆಯಿಂದ ನಡೆದುಕೊಳ್ಳಲಿ" ಎಂದಿದ್ಧಾರೆ.
"ಒಂದು ಕುಟುಂಬದಲ್ಲಿ ಕೊರೊನಾದಿಂದ ಸಾವಿಗೀಡಾದ ಒಬ್ಬ ವ್ಯಕ್ತಿಗೆ ಮಾತ್ರ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವ ಬಿಜೆಪಿ ಸರ್ಕಾರದ ನಿರ್ಧಾರ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯ ನಿಯಮಗಳಿಗೆ ವಿರುದ್ಧವಾಗಿದೆ ಎಂಬ ನಮ್ಮ ವಾದಕ್ಕೆ ಸುಪ್ರೀಂ ಕೋರ್ಟ್ ಸಹಮತ ವ್ಯಕ್ತಪಡಿಸಿರುವುದು ಸ್ವಾಗತಾರ್ಹ" ಎಂದು ಹೇಳಿದ್ದಾರೆ.
"ಕೊರೊನಾದಿಂದ ಮೃತಪಟ್ಟವರಿಗೆ ಪರಿಹಾರ ನೀಡಲು ಆರು ವಾರಗಳೊಳಗೆ ಮಾರ್ಗದರ್ಶಿ ಸೂತ್ರವನ್ನು ಸಿದ್ದಪಡಿಸಬೇಕೆಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ರಾಷ್ಟ್ರೀಯ ವಿಕೋಪ ಪರಿಹಾರ ನಿಧಿ ಗಂಭೀರವಾಗಿ ಪರಿಗಣಿಸಿ ಸೂಕ್ತಕ್ರಮ ಕೈಗೊಳ್ಳಬೇಕು" ಎಂದು ಒತ್ತಾಯಿಸಿದ್ದಾರೆ.
"ಸುಪ್ರೀಂ ಕೋರ್ಟ್ ಆದೇಶದನ್ವಯ ಕೊರೊನಾದಿಂದ ಮೃತ ಪಟ್ಟವರಿಗೆಲ್ಲರಿಗೂ ಪರಿಹಾರ ಸಿಗಬೇಕಾದರೆ ಸಾವಿನ ನಿಖರವಾದ ಸಂಖ್ಯೆ ಲಭ್ಯ ಇರಬೇಕಾಗುತ್ತದೆ. ಇದಕ್ಕಾಗಿ ಕೊರೊನಾ ಸಾವಿನ ಮರುಸಮೀಕ್ಷೆ ನಡೆಸಬೇಕೆಂದು ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತೇನೆ" ಎಂದಿದ್ದಾರೆ.