ಬೆಂಗಳೂರು, ಜೂ. 30(DaijiworldNews/SM): 2023ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಸರಕಾರವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವ ಅನಿವಾರ್ಯತೆ ನನ್ನ ಮೇಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮತ್ತೊಮ್ಮೆ ಬಿಜೆಪಿ ಸರಕಾರವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವ ಜವಾಬ್ದಾರಿ ಇದ್ದು, ಈ ನಿಟ್ಟಿನಲ್ಲಿ ಪ್ರಯತ್ನ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ಅಭಿವೃದ್ಧಿಯ ನಿಟ್ಟಿನಲ್ಲಿ ಒಳ್ಳೆಯ ಕೆಲಸ ಮಾಡುವ ಪ್ರಾಮಾಣಿಕ ಪ್ರಯತ್ನ ನಡೆಸಬೇಕಾಗಿದೆ. ಮುಂಬರುವ ೨ ವರ್ಷಗಳಲ್ಲಿ ಈ ಕಾರ್ಯವಾಗಬೇಕಿದೆ. ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದೆಂದು ಅವರು ತಿಳಿಸಿದ್ದಾರೆ. ಮುಂದಿನ ಚುನಾವಣೆ ಪ್ರಮುಖವಾಗಿದ್ದು, 130ಕ್ಕೂ ಹೆಚ್ಚು ಶಾಸಕರು ಬಿಜೆಪಿ ಪಕ್ಷದಿಂದಲೇ ಚುನಾಯಿತರಾಗಲಿದ್ದಾರೆ ಎಂದರು.
ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಕೈಗೊಳ್ಳಲಾಗುವುದು. ಹಾಗೂ ಜಿಲ್ಲಾವಾರು ರಾಜ್ಯದ ಜನ ಸಮಸ್ಯೆಗಳನ್ನು ಆಲಿಸಲಾಗುವುದು ಎಂದಿದ್ದಾರೆ. ಮುಂದಿನ ವಾರದಿಂದಲೇ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ತಲ ಮಟ್ಟದಿಂದಲೇ ಪಕ್ಷ ಸಂಘಟನೆಗೆ ಮುಂದಾಗಿರುವ ಸಿಎಂ ತಮ್ಮ ನಾಯಕತ್ವವನ್ನು ವಿರೋಧಿ ಬಣಕ್ಕೆ ತೋರ್ಪಡಿಸಲಿದ್ದಾರೆ.