ನವದೆಹಲಿ, ಜು 06 (DaijiworldNews/MS): ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಕಳೆದ ಕೆಲ ದಿನಗಳಿಂದ ಕೇಳಿಬರುತ್ತಿರುವ ವದಂತಿಗಳ ಮಧ್ಯೆ ಮಂಗಳವಾರ ಸಂಜೆ 5 ಗಂಟೆಗೆ ಪ್ರಮುಖ ಸಚಿವರೊಂದಿಗೆ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಆಯೋಜಿಸಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಭೆ ಕೊನೆ ಕ್ಷಣದಲ್ಲಿ ರದ್ದುಗೊಂಡಿದೆ. ಇದರ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆಯಬಹುದು ಎನ್ನಲಾಗಿದೆ.
ಮಂಗಳವಾರ ಸಂಜೆ ಐದು ಗಂಟೆಗೆ ನರೇಂದ್ರ ಮೋದಿ ಸಚಿವರೊಂದಿಗೆ ಸಭೆ ನಡೆಸಲು ನಿರ್ಧರಿಸಿದ್ದರು. ಎರಡು ವರ್ಷಗಳಲ್ಲಿ ಸಚಿವರ ಕಾರ್ಯದಕ್ಷತೆ ಮತ್ತು ಭವಿಷ್ಯದ ಯೋಜನೆಗಳ ಪ್ರಸ್ತಾವನೆಗಳ ಕುರಿತು ಚರ್ಚಿಸಲು ತೀರ್ಮಾನಿಸಲಾಗಿತ್ತು. ಅದರೆ ಈ ಸಭೆ ರದ್ದಾಗಿದ್ದು, ಸಂಪುಟ ವಿಸ್ತರಣೆ ಮತ್ತೆ ಮುಂದೂಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತ ಕೇಂದ್ರ ಸಚಿವರುಗಳಾದ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಶಿ, ಪಿಯೂಶ್ ಗೋಯಲ್ ಮತ್ತು ನರೇಂದ್ರ ಸಿಂಗ್ ತೋಮರ್ ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿತ್ತು.
ಎರಡನೇ ಬಾರಿ ಪ್ರಧಾನಿಯಾದ ಬಳಿಕ ನರೇಂದ್ರ ಮೋದಿ ಮೊದಲ ಬಾರಿಗೆ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಜ್ಯೋತಿರಾಧಿತ್ಯ ಸಿಂಧಿಯಾ, ಸುಶೀಲ್ ಕುಮಾರ್ ಮೋದಿ, ಸರ್ಬಾನಂದ ಸೋನಾವಲ, ಪಶುಪತಿ ಪರಾಸ್, ಪ್ರತಾಪ್ ಸಿಂಹ ಈ ಬಾರಿ ಮೋದಿ ಸಂಪುಟ ಸೇರುವ ನಿರೀಕ್ಷೆಯಲ್ಲಿದ್ದಾರೆ