ದಾವಣಗೆರೆ, ಜು 11 (DaijiworldNews/PY): "ರಾಜ್ಯದಲ್ಲಿ ಇನ್ನೂ 9 ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ವರ್ಷದಿಂದಲೇ ಪ್ರಾರಂಭವಾಗಲಿದೆ" ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ದಾವಣಗೆರೆ ಜಿಲ್ಲಾ ಪ್ರವಾಸದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, "ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಬೇಕು ಎನ್ನುವ ಉದ್ದೇಶವಿದೆ. ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದ್ದೇವೆ. ಆಸ್ಪತ್ರೆಯನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಾಣ ಮಾಡುವ ಬಗ್ಗೆ ಚರ್ಚೆಯಾಗಿದೆ. 9 ಜಿಲ್ಲೆಯಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುವ ಉದ್ದೇಶವಿದೆ. ರಾಜ್ಯದಲ್ಲಿ 18 ಹಾಗೂ ಈಗ ಪ್ರಾರಂಭವಾಗುತ್ತಿರುವ ಹೊಸ ನಾಲ್ಕು ಮೆಡಿಕಲ್ ಕಾಲೇಜುಗಳು ಜಿಲ್ಲಾ ಕೇಂದ್ರಗಳಲ್ಲೇ ಇವೆ. ತಾಲೂಕು ಮಟ್ಟದಲ್ಲಿ ಕಾಲೇಜು ಇಲ್ಲ. ಈ ವಿಚಾರದ ಬಗ್ಗೆ ಮನವಿ ಬಂದಿದ್ದು, ಪರಿಶೀಲನೆ ನಡೆಸಲಾಗುವುದು" ಎಂದಿದ್ದಾರೆ.
"ಈವರೆಗೆ ರಾಜ್ಯದಲ್ಲಿ ಎರಡೂವರೆ ಕೋಟಿ ಲಸಿಕೆ ನೀಡಲಾಗಿದೆ. ಆಗಸ್ಟ್ ತಿಂಗಳ ವೇಳೆಗೆ ದೊಡ್ಡ ಪ್ರಮಾಣದಲ್ಲಿ ರಾಜ್ಯಕ್ಕೆ ಲಸಿಕೆ ಬರಲಿದೆ. ಈ ವಿಚಾರದ ಬಗ್ಗೆ ಕೇಂದ್ರದಿಂದ ಆಶ್ವಾಸನೆ ದೊರೆತಿದೆ. ರಾಜ್ಯದಲ್ಲಿ ಎರಡೂವರೆ ಕೋಟಿ ಹಾಗೂ ಕೇಂದ್ರ ಸರ್ಕಾರ 38 ಕೋಟಿ ಮಂದಿಗೆ ಕೊರೊನಾ ಲಸಿಕೆ ನೀಡಿದೆ. ಆದ್ಯತೆಯ ಮೇರೆಗೆ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಿದ್ದು, ಇದರೊಂದಿಗೆ ಜನಸಾಮಾನ್ಯರಿಗೂ ನೀಡಲಾಗುವುದು" ಎಂದು ತಿಳಿಸಿದ್ದಾರೆ.