ಬೆಂಗಳೂರು, ಜು 11 (DaijiworldNews/PY): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಜುಲೈ 15ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಾದ್ಯಂತ ಜುಲೈ 15ರವರೆಗೆ ವ್ಯಾಪಕ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಗಾಳಿ, ಗುಡುಗುಸಹಿತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಜುಲೈ 12 ಮತ್ತು 13 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹಮಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿಯಲ್ಲಿ ಗಂಟೆಗೆ 45-55 ಕಿ.ಮೀ.ವೇಗದಲ್ಲಿ ಗಾಳಿ ಬೀಸುವ ಕಾರಣ ಈ ಸಂದರ್ಭ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಸಲಾಗಿದೆ.