ಬೆಂಗಳೂರು, ಜು.13 (DaijiworldNews/HR): ರಾಜ್ಯದ ಯುವಜನರಿಗೆ ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕು ಎಂದು ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಿದ್ದು, ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್)ಯ ಇತ್ತೀಚಿನ ಸುತ್ತೋಲೆ ಈ ದ್ರೋಹಕ್ಕೆ ಸಾಕ್ಷಿಯಾಗಿದೆ. ಕೇಂದ್ರ ಸರ್ಕಾರ ತಕ್ಷಣ ಗಮನಹರಿಸಿ ಈ ಅನ್ಯಾಯವನ್ನು ಸರಿಪಡಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿ ಕೊಡಬೇಕು" ಎಂದು ಆಗ್ರಹಿಸಿದ್ದಾರೆ.
ಇನ್ನು ಇತ್ತೀಚಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಹುತೇಕ ಯೋಜನೆಗಳ ಅನುಷ್ಠಾನ ಬ್ಯಾಂಕ್ ಗಳ ಮೂಲಕವೇ ನಡೆಯುವುದರಿಂದ ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿನ ಜನತೆ ಹೆಚ್ಚುಹೆಚ್ಚು ಬ್ಯಾಂಕುಗಳನ್ನು ಅವಲಂಬಿಸಿದ್ದು, ಕನ್ನಡ ಬಾರದ ಸಿಬ್ಬಂದಿಯಿಂದಾಗಿ ಈ ಜನಸಮುದಾಯ ಪ್ರತಿನಿತ್ಯ ಕಿರುಕುಳ ಅನುಭವಿಸುತ್ತಿದ್ದಾರೆ" ಎಂದು ಹೇಳಿದ್ದಾರೆ.