ವಿದಿಶಾ, ಜು 17 (DaijiworldNews/MS): ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಬಾವಿಯೊಳಗೆ ಬಿದ್ದಿದ್ದ ಬಾಲಕಿಯನ್ನು ರಕ್ಷಿಸುವ ಪ್ರಯತ್ನದಲ್ಲಿ ಉಂಟಾದ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ.
ವಿದಿಶಾ ಜಿಲ್ಲಾ ಕೇಂದ್ರದಿಂದ 50 ಕಿ.ಮೀ. ದೂರದ ಗಂಜ್ ಬಸೋದಾದಲ್ಲಿ ಮೂರು ದಿನಗಳ ಹಿಂದೆ ಬಾಲಕಿಯನ್ನು ರಕ್ಷಿಸುವ ಸಂದರ್ಭದಲ್ಲಿ ಬಾವಿಯ ಅವರಣ ಗೋಡೆ ಸಮೇತ ಮಣ್ಣು ಕುಸಿದು ೩೦ ಮಂದಿ ಬಾವಿಗೆ ಬಿದ್ದಿದ್ದರು. ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿ ಹಲವರನ್ನು ರಕ್ಷಿಸಿದ್ದರು. ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
"ಮಧ್ಯಪ್ರದೇಶದ ವಿದಿಶಾದಲ್ಲಿ ನಡೆದ ದುರಂತದ ಬಗ್ಗೆ ತೀರಾ ಆಘಾತವಾಗಿದೆ. ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳುತ್ತಿದ್ದೇನೆ. ಮೃತರ ಕುಟುಂಬಗಳಿಗೆ ಪಿಎಂಎನ್ಆರ್ಎಫ್ ವತಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು" ಎಂದು ಪಿಎಂಓ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ನಿಂದ ಟ್ವೀಟ್ ಮಾಡಲಾಗಿದೆ".