ಬೆಂಗಳೂರು, ಜು.18 (DaijiworldNews/HR): ಜುಲೈ.19 ಮತ್ತು 22ರಂದು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿದ್ದು, ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುವಂದು ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ರಾಜ್ಯ ಸರ್ಕಾರವು ಅವಕಾಶ ನೀಡಿದೆ.
ಈ ಕುರಿತು ಕೆಎಸ್ಆರ್ಟಿಸಿ ನಿಗಮದ ವ್ಯವಸ್ಥಾಪಕ ನಿರ್ದೇಶಕಾರದಂತ ಶಿವಯೋಗಿ ಸಿ ಕಳಸದ ಸುತ್ತೋಲೆ ಹೊರಡಿಸಿದ್ದು, "2020-21ನೇ ಸಾಲಿನ ಕರ್ನಾಟಕದ ಎಸ್ಎಸ್ಎಲ್ಸಿ ಅಂತಿಮ ಪರೀಕ್ಷೆಗಳನ್ನು ಸರ್ಕಾರ ಆದೇಶದಂತೆ ದಿನಾಂಕ 19 ಮತ್ತು 22ರಂದು ನಡೆಸಲು ತೀರ್ಮಾನಿಸಿದ್ದು, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲಾಗಿದೆ" ಎಂದಿದ್ದಾರೆ.
ಇನ್ನು ಪರೀಕ್ಷೆಗೆ ಹಾಜರಾಗುವ ರಾಜ್ಯದ ಎಲ್ಲಾ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಎಸ್ಎಸ್ಎಲ್ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವರಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ" ಎಂದು ತಿಳಿಸಿದ್ದಾರೆ.