ತುಮಕೂರು, ಜು 19 (DaijiworldNews/PY): "ನನ್ನೊಂದಿಗೆ ಬಿಜೆಪಿ ಶಾಸಕರು ಸಂಪರ್ಕದಲ್ಲಿದ್ದು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ತಯಾರಿದ್ದಾರೆ" ಎಂದು ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದರೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಹಲವು ನಾಯಕರು ಕಾಂಗ್ರೆಸ್ಗೆ ಸೇರಲು ಸಿದ್ದರಾಗಿದ್ದಾರೆ. ಅವರು ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿದ್ದಾರೆ. ಪಕ್ಷ ಬಲಪಡಿಸುವುದು, ಅಧಿಕಾರಕ್ಕೆ ಬರುವುದು ಬೇಡವೇ?" ಎಂದು ಕೇಳಿದ್ದಾರೆ.
ಸಿಎಂ ಯಡಿಯೂರಪ್ಪ ಅವರ ದೆಹಲಿ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ರಾಜ್ಯ ಬಿಜೆಪಿಯಲ್ಲಿ ಸದ್ದಿಲ್ಲದೇ ಏನೇನೋ ನಡೆಯುತ್ತಿದೆ. ಯಡಿಯೂರಪ್ಪ ದೆಹಲಿ ಭೇಟಿ ಸಂದರ್ಭ ಹೈಕಮಾಂಡ್ ಹಲವಾರು ಮಹತ್ವದ ಸೂಚನೆಗಳನ್ನು ಕೊಟ್ಟಿದೆ. ಹಾಗಾಗಿ ಯಡಿಯೂರಪ್ಪ ಅವರು ಬಿಜೆಪಿ ಶಾಸಕಾಂಗ ಸಭೆ ಕರೆದಿದ್ದಾರೆ" ಎಂದಿದ್ದಾರೆ.
"ಈಗಾಗಲೇ ಕಾಂಗ್ರೆಸ್ ನಾಯಕ ಅಲ್ಲಮ್ ವೀರಭದ್ರಪ್ಪ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಇದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವವರ ಬಗ್ಗೆ ಪರಿಶೀಲನೆ ನಡೆಸಲಿದೆ" ಎಂದು ಹೇಳಿದ್ದಾರೆ.
"ಸಿಎಂ ರಾಜೀನಾಮೆ ನೀಡಬೇಕು ಎಂದು ಪಕ್ಷದವರೇ ಪಟ್ಟು ಹಿಡಿದಿದ್ದಾರೆ. ಬಿಜೆಪಿ ಸರ್ಕಾರ ನೀರ ಮೇಲಿನ ಗುಳ್ಳೆಯಂತಿದ್ದು, ಇದು ಯಾವಾಗ ಬೇಕಾದರೂ ಒಡೆದು ಹೋಗಬಹುದು" ಎಂದಿದ್ದಾರೆ.