ಬೆಂಗಳೂರು, ಜು.19 (DaijiworldNews/HR): ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಜುಲೈ 19ರಿಂದ 23ರವರೆಗೆ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿಎಸ್ ಪಾಟೀಲ್ ಇಂದು ಮುನ್ಸೂಚನೆ ನೀಡಿದ್ದಾರೆ.
ಸಾಂಧರ್ಭಿಕ ಚಿತ್ರ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು, ಮನೆಗಳು ಜಲಾವೃತಗೊಂಡಿವೆ. ಮಳೆಯ ಆರ್ಭಟಕ್ಕೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ.
ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜು.19 ಮತ್ತು 20ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಜು.21,22 ಮತ್ತು 23ರಂದು ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ನ್ನು ಘೋಷಣೆ ಮಾಡಲಾಗಿದೆ.
ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಜು.19, 21 ಮತ್ತು 22ರಂದು ಹಳದಿ ಅಲರ್ಟ್ನ್ನು, ಹಾಗೂ ಜು.23ರಂದು ಆರೆಂಜ್ ಅಲರ್ಟ್ನ್ನು ಘೋಷಿಸಲಾಗಿದೆ.
ಬೆಳಗಾವಿ, ಹಾವೇರಿ, ಧಾರವಾಡ, ಗದಗ, ಬೀದರ್, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜು.19, 22 ಮತ್ತು 23ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಎರಡು ದಿನಗಳವರೆಗೆ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.