ಬೆಂಗಳೂರು, ಜು 21 DaijiworldNews/MS): ಪೆಗಾಸಸ್ ಗೂಡಚಾರಿಕೆಯ ಕಬಂಧ ಬಾಹುಗಳು ರಾಜ್ಯದಲ್ಲೂ ಚಾಚಿರುವುದು ಈಗ ಬಹಿರಂಗವಾಗಿದೆ.ಇಸ್ರೇಲ್ನ ಪೆಗಾಸಸ್ ತಂತ್ರಾಂಶದ ಮೂಲಕ ಭಾರತ ಪತ್ರಕರ್ತರು ಹಾಗೂ ಪ್ರಭಾವಿಗಳ ವಿರುದ್ಧ ಬೇಹುಗಾರಿಕೆ ನಡೆಸಲಾಗುತ್ತಿತ್ತು ಎಂದು ದಿ ವೈರ್ ವರದಿ ಪ್ರಕಟಿಸಿದೆ.
೨೦೧೯ ರಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಲು ಇದನ್ನು ಬಳಸಿಕೊಳ್ಳಲಾಗುತ್ತಿತ್ತು ಎಂಬ ಗಂಭೀರ ಆರೋಪ ಕೇಳಿಬರುತ್ತಿರುವಂತೆಯೇ ರಾಜ್ಯ ಕಾಂಗ್ರೆಸ್ ನಾಯಕರು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಗಳಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿಯವರ ಆಪ್ತರು ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಬೇಹುಗಾರಿಕೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಪ್ರಕರಣ ಸಂಬಂಧ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಬೇಹುಗಾರಿಕೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡುವಂತೆ ಕೇಳಿಕೊಂಡಿದ್ದಾರೆ
ಈ ನಡುವೆ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ರಾಜ್ಯ ಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಂತಾದವರು ಪತ್ರಿಕಾಗೋಷ್ಟಿ ನಡೆಸಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.