ಬೆಂಗಳೂರು, ಜು 23 (DaijiworldNews/MS): ಕೊರೊನೊ ಭೀತಿಯ ನಡುವೆಯೂ ಎಸೆಸೆಲ್ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದಿದ್ದು, ಆಗಸ್ಟ್ 10ರ ಆಸುಪಾಸಿನೊಳಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಪರೀಕ್ಷೆಯಲ್ಲಿ ಒಟ್ಟಾರೆ 96.65ರಷ್ಟು ಹಾಜರಾತಿ ದಾಖಲಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಕೋವಿಡ್ ಆತಂಕದ ನಡುವೆಯೂ ಸರ್ಕಾರ ಸದ್ದುದ್ದೇಶದಿಂದ ಸಕಲ ಮುನ್ನೆಚ್ಚರಿಕೆ ಕ್ರಮದೊಂದಿಗೆ ಪರೀಕ್ಷೆ ನಡೆಸಿದೆ. ಇಂದು ಯಶಸ್ವಿಯಾಗಿ ಪರೀಕ್ಷೆ ಮುಗಿದಿದ್ದು, ಈ ಪರೀಕ್ಷೆ ಯಶಸ್ಸಿಗೆ ಕಾರಣರಾದ ನಾಡಿನ ಎಲ್ಲಾ ಶಿಕ್ಷಕ ವೃಂದಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು
ಎಸ್ಎಸ್ಎಲ್ಸಿ ಪರೀಕ್ಷೆ ಮುಕ್ತಾಯವಾಗಿದ್ದು, ಒಎಂಆರ್ ಉತ್ತರ ಪತ್ರಿಕೆಗಳನ್ನು ಡಿಜಿಟಲ್ ಸ್ಕ್ಯಾನಿಂಗ್ಗೆ ಕಳುಹಿಸಿ ನಂತರ ಮೌಲ್ಯಮಾಪನ ಮಾಡಿ ಆಗಸ್ಟ್ 10ರೊಳಗೆ ಫಲಿತಾಂಶ ಪ್ರಕಟ ಮಾಡಲಿದ್ದೇವೆ.ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಕೇರಳ ಮತ್ತು ಮಹಾರಾಷ್ಟ್ರ, ಆಂಧ್ರಪ್ರದೇಶ, ಗೋವಾ ರಾಜ್ಯಗಳಿಂದ ಒಟ್ಟು 706 ಮಕ್ಕಳು ಬಂದು ಪರೀಕ್ಷೆ ಬರೆದಿದ್ದಾರೆ ಎಂದು ಮಾಹಿತಿ ನೀಡಿದರು.