ಬೆಂಗಳೂರು, ಜು 23 (DaijiworldNews/MS): ವಲಸಿಗ ಸಚಿವರನ್ನು ಮತ್ತೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ಇನ್ನು ವಲಸಿಗ ಸಚಿವರನ್ನು ಮತ್ತೆ ಕಾಂಗ್ರೆಸ್ ಗೆ ಸೇರಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ನಮ್ಮ ಪಕ್ಷಕ್ಕೆ ಬರುತ್ತಾರೋ, ಇಲ್ಲವೋ ಎನ್ನುವುದು ನನಗಂತೂ ಗೊತ್ತಿಲ್ಲ. ಪಕ್ಷಕ್ಕೆ ಅವರನ್ನು ವಾಪಾಸು ಸೇರಿಸಿಕೊಳ್ಳುವುದಿಲ್ಲ ಎಂದು ಈ ಹಿಂದೆ ಸದನದಲ್ಲೇ ಹೇಳಿದ್ದೇನೆ. ಅದಕ್ಕೆ ನಾನು ಈಗಲೂ ಬದ್ಧನಿದ್ದೇನೆ ಎಂದು ಪುನರುಚ್ಚರಿಸಿದ್ದಾರೆ.
ಇನ್ನು ಸಿಎಂ ಬದಲಾವಣೆ ವಿಚಾರವಾಗಿ ಸ್ವಾಮೀಜಿಗಳ ನಡೆ ಖಂಡಿಸಿರುವ ಸಿದ್ದು, ಇಲ್ಲಿ ಜನಾಭಿಪ್ರಾಯವೇ ಅಂತಿಮ. ಮಠಾಧೀಶರು ರಾಜಕೀಯ ಚಟುವಟಿಕೆಗಳಲ್ಲಿ ತೊಡಗುವುದರಿಂದ ಮಠಗಳ ಬಗ್ಗೆ ಜನರಿಗಿರುವ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯಾಗುತ್ತದೆ ಎಂದಿದ್ದಾರೆ.
'ದಲಿತರಿಗೆ ಸಿಎಂ' ವಿಚಾರ ಪ್ರಸ್ತಾಪಿಸಿರುವ ಸಿದ್ದರಾಮಯ್ಯ, ದಲಿತರ ಬಗ್ಗೆ ಬಿಜೆಪಿ ಅವರಿಗೆ ನೈಜ ಕಾಳಜಿ ಇದ್ದರೆ ಬಿಎಸ್ ವೈ ಅವರು ರಾಜೀನಾಮೆ ನೀಡಿದ ಬಳಿಕ ದಲಿತರನ್ನೇ ಮುಖ್ಯಮಂತ್ರಿ ಮಾಡಲಿ. ಇದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಅವರಿಗೆ ನನ್ನ ಸವಾಲು.ಸಿದ್ದರಾಮಯ್ಯ ದಲಿತರನ್ನು ಸಿಎಂ ಮಾಡಲಿ ಎಂದು ನಳಿನ್ ಕುಮಾರ್ ಕಟೀಲ್ ನನಗೆ ಹೇಳಿದ್ದರು. ನಮ್ಮ ಪಕ್ಷದಲ್ಲಿ ದಲಿತರು ಸಿಎಂ ಆಗಿದ್ದಾರೆ. ಹೀಗಾಗಿ ಸದ್ಯ ಬಿಜೆಪಿಗೆ ಆ ಅವಕಾಶ ಇದೆ, ನಳಿನ್ ಕುಮಾರ್ ಕಟೀಲ್ ಅವರು ಈಗ ದಲಿತರನ್ನು ಸಿಎಂ ಮಾಡಿ, ಸಾಮಾಜಿಕ ನ್ಯಾಯ ಎತ್ತಿಹಿಡಿಯಲಿ ಎಂದಿದ್ದಾರೆ.
2019ರಲ್ಲಿ ಬಂದ ಪ್ರವಾಹದಿಂದ ಸಂತ್ರಸ್ತರಾದವರಿಗೇ ಇನ್ನೂ ಬಿಜೆಪಿ ಸರ್ಕಾರ ಪರಿಹಾರ ಕೊಟ್ಟಿಲ್ಲ. ಈಗ ಎಲ್ಲಾ ಕಡೆ ಮಳೆ ಬಂದು ಜನ, ಜಾನುವಾರಗಳ ಪ್ರಾಣ ಹಾನಿಯಾಗಿದೆ, ಮನೆಗಳು ಬಿದ್ದಿವೆ. ಇಂತಹ ಸಮಯದಲ್ಲಿ ಸರ್ಕಾರ ಯುದ್ದೋಪಾದಿಯಲ್ಲಿ ಕೆಲಸ ಮಾಡೋ ಬದಲು ಸಿಎಂ ಬದಲಾವಣೆ ಮಾಡುವ ಕೆಲಸದಲ್ಲಿ ಮುಳುಗಿದೆ ಎಂದು ಟೀಕಿಸಿದ್ದಾರೆ.