ಬೆಳಗಾವಿ, ಜು 25 (DaijiworldNews/PY): ಮಳೆಯ ಪರಿಣಾಮ ಪ್ರವಾಹದಿಂದ ಭಾಧಿತಗೊಂಡಿರುವ ಹಿರಣ್ಯಕೇಶಿ ನದಿಪಾತ್ರದ ವಿವಿಧ ಸ್ಥಳಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.
ಕಳೆದ ಒಂದು ವಾರದಿಂದ ಮಹಾರಾಷ್ಟ್ರ ರಾಜ್ಯ ಹಾಗೂ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಜಿಲ್ಲೆಯ ಸಪ್ತ ನದಿಗಳಲ್ಲಿ ಹಾಗೂ ಬೆಳಗಾವಿ ಸಮೀಪದ ಬಳ್ಳಾರಿ ನಾಲಾಗಳಲ್ಲಿ ನೀರಿನ ಹರಿವು ಹೆಚ್ಚಾಗಿ ಅಕ್ಕಪಕ್ಕದ ಕೆಲವು ಗ್ರಾಮಗಳು ಜಲಾವೃತಗೊಂಡಿವೆ.
ಈ ವೇಳೆ ಸಂತ್ರಸ್ತರ ಜೊತೆ ಮಾತನಾಡಿದ ಸಿಎಂ, "ಪ್ರತಿವರ್ಷ ಪ್ರವಾಹದಿಂದ ಸಂಕೇಶ್ವರ ಪಟ್ಟಣದಲ್ಲಿ ಬಾಧಿತಗೊಳ್ಳುವ ಮನೆಗಳ ಶಾಶ್ವತ ಸ್ಥಳಾಂತರಕ್ಕೆ ಐವತ್ತು ಎಕರೆ ಭೂಮಿ ಲಭ್ಯವಿದೆ. ಸಂತ್ರಸ್ತರಿಗೆ ಮನೆ ನಿರ್ಮಿಸಿ ಕೊಡಲು ತೀರ್ಮಾನಿಸಲಾಗಿದೆ" ಎಂದಿದ್ದಾರೆ.
"ಸಂತ್ರಸ್ತರು ಸಹಕರಿಸಿದಲ್ಲಿ ಐವತ್ತು ಎಕರೆ ಜಾಗದಲ್ಲಿ ಮನೆಗಳನ್ನು ಒದಗಿಸಲಾಗುತ್ತದೆ. ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಜನರು ಸಂಕಷ್ಟಕ್ಕೊಳಗಾಗಿದ್ದು, ಅವರಿಗೆ ಸೂಕ್ತ ಪರಿಹಾರ ವ್ಯವಸ್ಥೆ ಕಲ್ಪಿಸಲಾಗುವುದು" ಎಂದು ತಿಳಿಸಿದ್ದಾರೆ.
"ಮಳೆ ನಿಂತ ಬಳಿಕ ಮನೆ ಮನೆ ಸಮೀಕ್ಷೆ ನಡೆಸಿ ಬಳಿ ಸೂಕ್ತವಾದ ಪರಿಹಾರ ನೀಡಲಾಗುವುದು. ಕಾಳಜಿ ಕೇಂದ್ರಗಳಲ್ಲಿ ಊಟೋಪಹಾರ ಸೇರಿದಂತೆ ಎಲ್ಲಾ ರೀತಿಯಾದ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಈ ಬಗ್ಗೆ ಜನರು ಆತಂಕ ಪಡುವ ಅವಶ್ಯಕತೆ ಇಲ್ಲ. ಸರ್ಕಾರ ನಿಮ್ಮೊಂದಿಗಿದೆ" ಎಂದು ಹೇಳಿದ್ದಾರೆ.
ಈ ವೇಳೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, "ಎನ್ಡಿಆರ್ಎಫ್ ಅಡಿ ಸಂತ್ರಸ್ತರಿಗೆ ಪರಿಹಾರ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಎಲ್ಲರಿಗೂ ಕೂಡಾ ಪರಿಹಾರ ನೀಡಲಾಗುವುದು" ಎಂದು ತಿಳಿಸಿದ್ದಾರೆ.