ಬೆಂಗಳೂರು, ಜು 27 (DaijiworldNews/MS): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಗೋಲಿಬಾರ್ ಸಂಬಂಧಿಸಿದ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
2019ರ ಡಿಸೆಂಬರ್ 19ರಂದು ಪ್ರತಿಭಟನಾಕಾರರ ಮೇಲೆ ನಡೆದಿದ್ದ ಗೋಲಿಬಾರ್ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲು ಸರ್ಕಾರಕ್ಕೆ ನಿರ್ದೇಶನ ಕೋರಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ನಿರ್ದೇಶನ ನೀಡಿತು.
ವಿಚಾರಣೆ ವೇಳೆ ಸರಕಾರಿ ವಕೀಲರು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದ ಮ್ಯಾಜಿಸ್ಟ್ರೇಟ್ ತನಿಖೆ ಪೂರ್ಣಗೊಂಡಿದೆ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು. ವರದಿ ಆಧರಿಸಿ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ನ್ಯಾಯಪೀಠ ಪ್ರಶ್ನೆಗೆ ಉತ್ತರಿಸಿದ ಸರಕಾರದ ಪರ ವಕೀಲರು ವರದಿ ಪರಿಶೀಲಿಸಲಾಗುತ್ತಿದೆ, ಬಳಿಕ ಕ್ರಮ ಜರುಗಿಸುವ ಕುರಿತು ಸರಕಾರ ನಿರ್ಧಾರ ಕೈಗೊಳ್ಳಲಿದೆ ಅದಕ್ಕೆ ಎರಡು ವಾರ ಕಾಲಾವಕಾಶ ಬೇಕು ಎಂದು ಕೋರಿದರು.ಅದನ್ನು ಪರಿಗಣಿಸಿದ ನ್ಯಾಯಪೀಠ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಆಧಾರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತ ವರದಿಯನ್ನು ಸರಕಾರ ಆಗಸ್ಟ್ 25ರೊಳಗೆ ಮುಚ್ಚಿದ ಲಕೋಟೆಯಲ್ಲಿ ಕೋರ್ಟಿಗೆ ಸಲ್ಲಿಸಬೇಕು. ಅನಂತರ ವರದಿಯಲ್ಲಿರುವ ವಿಚಾರಗಳನ್ನು ಬಹಿರಂಗಪಡಿಸುವ ಕುರಿತು ನ್ಯಾಯಾಲಯ ಯೋಚಿಸಲಿದೆ ಎಂದು ತಿಳಿಸಿ ವಿಚಾರಣೆಯನ್ನು ಮುಂದೂಡಿತು.