ಹುಬ್ಬಳ್ಳಿ, ಜು 29 (DaijiworldNews/MS): ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ತಮ್ಮ ಊರಾದ ಹುಬ್ಬಳ್ಳಿಗೆ ಆಗಮಿಸಿರುವ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿ ತಾಯಿ ದಿ. ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ ದಿ. ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ ಗೌರವ ಸಮರ್ಪಿಸಿದರು.
ತಂದೆ-ತಾಯಿಯ ಸಮಾಧಿಗೆ ಪ್ರದಕ್ಷಿಣೆ ಹಾಕಿ ಕೆಲನಿಮಿಷ ಮೌನವಾಗಿ ಸ್ಮರಣೆ ಮಾಡಿದರು. ಉಭಯ ಪುತ್ಥಳಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ ಮಾಡಿದರು. ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ, ತಂದೆ, ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು. ಅಧಿಕಾರ ಸ್ವೀಕರಿಸಿದ ನಂತರ ಅವರ ಸಮಾಧಿಗಳ ದರ್ಶನ ಪಡೆದಿರುವೆ ಎಂದು ಹೇಳಿದರು.
ಹುಬ್ಬಳ್ಳಿ-ಧಾರವಾಡ ರಾಜ್ಯದ ಎರಡನೇ ಅತಿದೊಡ್ಡ ನಗರವಾಗಿದೆ. ಅವಳಿ ನಗರದ ಸಮಸ್ಯೆಗಳನ್ನು ಬಗೆಹರಿಸಿ, ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದಾಗಿ ಹೇಳಿದರು.ಹುಬ್ಬಳ್ಳಿ ನನಗೆ ಅತ್ಯಂತ ಪ್ರೀತಿಯ ಊರು. ನನ್ನ ಶೈಕ್ಷಣಿಕ ಜೀವನದ ಅಪಾರ ಪ್ರಮಾಣದ ಸ್ನೇಹಿತರ ಬಳಗ ಇಲ್ಲಿದೆ. ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಆಗಮಿಸುತ್ತೇನೆ ಎಂದು ಅಂದುಕೊಂಡಿರಲಿಲ್ಲ. ಪಕ್ಷ ಹಾಗೂ ಕೇಂದ್ರದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆರ್ಶೀವಾದಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಏರಿದ್ದೇನೆ ಎಂದು ಹೇಳಿದರು.