ನವದೆಹಲಿ, ಜು 31 (DaijiworldNews/PY): "ಒಂದು ವಾರದೊಳಗೆ ಸಂಪುಟ ವಿಸ್ತರಣೆ ಮಾಡಲಾಗುವುದು" ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶುಕ್ರವಾರ ಬಿಜೆಪಿ ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಅವರು, "ಶೀಘ್ರವೇ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಸದ್ಯ ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಭೀತಿ ಹಾಗೂ ಪ್ರವಾಹದ ಕಾರಣದಿಂದ ಪರಿಸ್ಥಿತಿ ನಿಯಂತ್ರಿಸುವ ನಿಟ್ಟಿನಲ್ಲಿ ಒಂದು ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು" ಎಂದು ತಿಳಿಸಿದ್ದಾರೆ.
"ಸಂಪುಟದಲ್ಲಿ ಎಷ್ಟು ಜನ ಇರಬೇಕು. ಯಾರು ಸೇರಬೇಕು ಎನ್ನುವ ಬಗ್ಗೆ ಇನ್ನೂ ಚರ್ಚಿಸಿಲ್ಲ. ಪ್ರಧಾನಿ ಮೋದಿ ಹಾಗೂ ಪಕ್ಷದ ವರಿಷ್ಠರನ್ನು ಭೇಟಿ ಮಾಡಿದ್ದು, ರಾಜ್ಯದ ಹಲವು ವಿಷಯಗಳ ಬಗ್ಗೆ ವರಿಷ್ಠರೊಂದಿಗೆ ಪ್ರಸ್ತಾಪ ಮಾಡಿದ್ದೇನೆ" ಎಂದಿದ್ದಾರೆ.
"ಪ್ರಸ್ತುತ ಪರಿಸ್ಥಿತಿಯಲ್ಲಿ ಸಚಿವರಿಲ್ಲದೇ ನಿರ್ವಹಣೆ ಸಾಧ್ಯವಿಲ್ಲ. ಈ ಹಿನ್ನೆಲೆ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಇನ್ನು ಮೂರ್ನಾಲ್ಕು ದಿನಗಳಲ್ಲಿ ದೆಹಲಿಗೆ ಮತ್ತೆ ಭೇಟಿ ನೀಡಿಲಿದ್ದು, ಹೈಕಮಾಂಡ್ ಜೊತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು" ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿರುವ ಸಿಎಂ ಬೊಮ್ಮಾಯಿ, ಹುಬ್ಬಳ್ಳಿ, ಧಾರಾವಾಢದಲ್ಲಿ ಏಮ್ಸ್ ನಿರ್ಮಾಣ ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ. ಕಲಬುರ್ಗಿಯಲ್ಲಿ ಇಎಸ್ಐ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯನ್ನು ಪ್ರಾದೇಶಿಕ ಏಮ್ಸ್ ಮಾದರಿಯ ಸಂಸ್ಥೆಯಾಗಿ ಉನ್ನತೀಕರಿಸುವಂತೆ ಮನವಿ ಮಾಡಿದ್ದಾರೆ.
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ, ರಾಜ್ಯದ ನೀರಾವರಿ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದು, ಕೇಂದ್ರ ಅಧಿಕ ಪ್ರಮಾಣದ ಅನುದಾನ ಒದಗಿಸುವ ನಿಟ್ಟಿನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಎತ್ತಿನ ಹೊಳೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳನ್ನಾಗಿ ಘೋಷಿಸಲು ಮನವಿ ಮಾಡಿದ್ದಾರೆ.
ಈ ವೇಳೆ ತಮ್ಮನ್ನು ಮೊದಲ ಬಾರಿ ಭೇಟಿ ಮಾಡಿದ ಸಿಎಂ ಬೊಮ್ಮಾಯಿ ಅವರಿಗೆ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ ಅವರು, "ಕರ್ನಾಟಕದ ಅಭಿವೃದ್ದಿಗೆ ಎಲ್ಲಾ ಅಗತ್ಯವಾದ ಸಹಕಾರ ನೀಡುವುದಾಗಿ ಹೇಳಿದ್ದಾರೆ" ಎಂದು ಸಿಎಂ ಸಚಿವಾಲಯ ಮಾಹಿತಿ ನೀಡಿದೆ.