ನವದೆಹಲಿ, ಜು 31(DaijiworldNews/MS): ಕರ್ನಾಟಕದ ನೆರೆಯ ರಾಜ್ಯವಾಗಿರುವ ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿರುವ ಅವರು ಮಾಧ್ಯಮದೊಂದಿಗೆ ಮಾತನಾಡಿ, ನಮ್ಮ ಮೊದಲ ಆಧ್ಯತೆ ಕೊರೊನಾ ಪ್ರಸರಣ ತಡೆಯುವುದಾಗಿದ್ದು, ಈಗಾಗಲೇ ಇದಕ್ಕಾಗಿ ರಾಜ್ಯದ ಗಡಿ ಪ್ರದೇಶಗಳಲ್ಲಿ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಲಾಗಿದೆ. ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಂತೆಯೇ ಕೋವಿಡ್-19 ಪರಿಸ್ಥಿತಿ ಕುರಿತು ಗಡಿ ಜಿಲ್ಲೆಯ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ.
ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಸೋಂಕು ಮತ್ತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳ-ಕರ್ನಾಟಕ ಗಡಿಭಾಗದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ .ರಾಜ್ಯದಲ್ಲೂ ಏಕಾಏಕಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.