ನವದೆಹಲಿ, ಜು 31 (DaijiworldNews/PY): ದೇಶದಲ್ಲಿ ಇಳಿಕೆಯಾಗಿದ್ದ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಒಂದು ವಾರದಿಂದ ದಿನನಿತ್ಯ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ನಡುವೆ ವೈಜ್ಞಾನಿಕ ವಲಯದಲ್ಲಿ ಕೊರೊನಾದ ಮೂರನೇ ಅಲೆ ಆರಂಭವಾಗಿದೆಯೇ ಎನ್ನುವ ಚರ್ಚೆ ಕೇಳಿಬರುತ್ತಿದೆ.
ಸಾಂದರ್ಭಿಕ ಚಿತ್ರ
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,649 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,16,13,993ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 593 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು 4,23,810 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ 3,07,81,263 ಮಂದಿ ಗುಣಮುಖರಾಗಿದ್ದಾರೆ. ರಾಷ್ಟ್ರೀಯ ಕೊರೊನಾ ಚೇತರಿಕೆ ಪ್ರಮಾಣ ಶೇ.97.37ಕ್ಕೆ ಹೆಚ್ಚಳಗೊಂಡಿದೆ.
ಈವರೆಗೆ 46 ಕೋಟಿಗೂ ಹೆಚ್ಚು ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಶುಕ್ರವಾರ ರಾತ್ರಿ 7 ಗಂಟೆ ವೇಳೆಗೆ 44,38,901 ಮಂದಿಗೆ ಲಸಿಕೆ ನೀಡಲಾಗಿದೆ. ಇಲ್ಲಿಯವರೆಗೆ 45 ಕೋಟಿಗೂ ಹೆಚಚು ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಈವರೆಗೆ 46,15,18,479 ಫಲಾನುಭವಿಗಳಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
"ಭಾರತದಲ್ಲಿ ಲಾಕ್ಡೌನ್ ಸಡಿಲಿಕೆಯ ಬಳಿಕ ಸಾರ್ವಜನಿಕರು ಕೊರೊನಾ ಮಾರ್ಗಸೂಚಿಯನ್ನು ನಿರ್ಲಕ್ಷಿಸುತ್ತಿರುವುದು ತಿಳಿದುಬಂದಿದೆ. ಕೊರೊನಾ ನಿಯಮಗಳ ಉಲ್ಲಂಘನೆಯ ಕಾರಣದಿಂದ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದಕ್ಕೆ ಮುಖ್ಯ ಕಾರಣ" ಎಂದು ಆರೋಗ್ಯ ಇಲಾಖೆ ರಾಜ್ಯ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್ ತಿಳಿಸಿದ್ದಾರೆ.
"ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರದಿಂದ ಮೂಲಭೂತ ಸೌಕರ್ಯ ಹಾಗೂ ಆರ್ಥಿಕ ನೆರವು, ಅಗತ್ಯ ತಂತ್ರಜ್ಞಾನದ ಸಹಾಯ ನೀಡುವುದರಿಂದ ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಸಹಕರಿಸಲಿದೆ" ಎಂದು ಹೇಳಿದ್ದಾರೆ.