ಧನಬಾದ್/ರಾಂಚಿ, ಆ.02 (DaijiworldNews/HR): ಜಾರ್ಖಂಡ್ನ ಧನಬಾದ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರ ಸಾವಿಗೆ ಸಂಬಂಧಿಸಿದಂತೆ 17 ಮಂದಿಯನ್ನು ಬಂಧಿಸಲಾಗಿದ್ದು, 243 ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಹಿರಿಯ ಜಿಲ್ಲಾ ಪೊಲೀಸ್ ಅಧೀಕ್ಷಕ (ಎಸ್ಎಸ್ಪಿ) ಸಂಜೀವ್ ಕುಮಾರ್ , ಪ್ರಕರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಬಯಲುಮಾಡಿದ ಒಬ್ಬ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಪೊಲೀಸರನ್ನು ಈಗಾಗಲೇ ಅಮಾನತು ಮಾಡಲಾಗಿದ್ದು, ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರುವ ಕೆಲವು ಪ್ರದೇಶಗಳ ಮೇಲೆ ದಾಳಿ ನಡೆಸಿ, 243 ವ್ಯಕ್ತಿಗಳನ್ನು ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಪೊಲೀಸರು ಜಿಲ್ಲೆಯಲ್ಲಿರುವ 53 ಹೋಟೆಲ್ಗಳಲ್ಲಿ ಶೋಧ ಕಾರ್ಯ ನಡೆಸಿ ಈ ಘಟನೆಗೆ ಸಂಪರ್ಕವಿರುವ 17 ಮಂದಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿದೆ" ಎಂದು ಹೇಳಿದ್ದಾರೆ.
ಇನ್ನು ಧನಬಾದ್ ಪಟ್ಟಣದ ಜಡ್ಜಸ್ ಕಾಲೊನಿಯಲ್ಲಿ ನ್ಯಾಯಾಧೀಶ ಉತ್ತಮ್ ಆನಂದ್ ಅವರು ಕಳೆದ ಬುಧವಾರ ಬೆಳಿಗ್ಗೆ ವಾಯುವಿಹಾರ ಮಾಡುತ್ತಿದ್ದು, ವಾಹನವೊಂದು ಅವರಿಗೆ ಡಿಕ್ಕಿ ಹೊಡೆದು, ಪರಾರಿಯಾಗಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ದಾರಿಹೋಕರೊಬ್ಬರು ಆಸ್ಪತ್ರೆಗೆ ದಾಖಲಿಸಿದ್ದು, ಈ ವೇಳೆ ಅವರು ಮೃತಪಟ್ಟಿದ್ದರು.