ಬೆಂಗಳೂರು, ಆ 08 (DaijiworldNews/PY): ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿದ ಆದೇಶವನ್ನು ವಾಪಾಸ್ಸು ಪಡೆಯುವಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಈ ಬಗ್ಗೆ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಬಿಎಸ್ವೈ, "ಆಗಸ್ಟ್ 7ರಂದು ಹೊರಡಿಸಿರುವ ಸರ್ಕಾರದ ಆದೇಶದಲ್ಲಿ ಬಿ ಎಸ್ ಯಡಿಯೂರಪ್ಪ, ಮಾನ್ಯ ನಿಕಟಪೂರ್ವ ಮುಖ್ಯಮಂತ್ರಿಗಳು ಇವರಿಗೆ ನೂತನವಾಗಿ ಪದಾರೋಹಣ ಮಾಡಿದ ಮುಖ್ಯಮಂತ್ರಿಗಳು ಪದವಿ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶಿಸಿದ್ದು, ಈ ಹಿಂದೆ ನಿಕಟಪೂರ್ವ ಮುಖ್ಯಮಂತ್ರಿಗಳೀಗೆ ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಮಾತ್ರ ನನಗೆ ನೀಡಬೇಕಾಗಿ ಹಾಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು" ಎಂದು ಕೋರಿದ್ದಾರೆ.
"ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುವವರೆಗೆ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ" ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಹೊರಡಿಸಿತ್ತು.