ಬೆಂಗಳೂರು, ಆ 09 (DaijiworldNews/PY): ಕೊರೊನಾ ಸೋಂಕು ಹೆಚ್ಚಿರುವ ರಾಜ್ಯದ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ತೀರ್ಮಾನಿಸಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೈಸೂರಿಗೆ ತೆರಳುವ ಮುನ್ನ ಇಂದು ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಇಂದು ನಾನು ಮೈಸೂರಿಗೆ ಭೇಟಿ ನೀಡಲಿದ್ದು, ಮೈಸೂರು ಜಿಲ್ಲೆಯಲ್ಲಿನ ಕೊರೊನಾ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ. ಬಳಿಕ ಕೊರೊನಾ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಲಿದ್ದೇನೆ. ಕೊರೊನಾ ಸೋಂಕು ಹೆಚ್ಚಿರುವ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ನಿರ್ಧರಿಸಿದ್ದೇನೆ" ಎಂದಿದ್ಧಾರೆ.
"ಬಳಿಕ ಚಾಮುಂಡಿ ಬೆಟ್ಟಕ್ಕೆ ತೆರಳಲಿದ್ದು, ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯುತ್ತೇನೆ. ನಂತರ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಿದ್ದೇನೆ" ಎಂದು ಹೇಳಿದ್ದಾರೆ.