ನವದೆಹಲಿ, ಆ 12 (DaijiworldNews/MS): ಹಿಮಾಚಲ ಪ್ರದೇಶದ ಕಿನ್ನೌರ್ ಪ್ರದೇಶದಲ್ಲಿ ಭೂ ಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 13ಕ್ಕೇರಿದ್ದು, ಮತ್ತಷ್ಟು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಇನ್ನೊಂದೆಡೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಅವಘಡದಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರ ಕುಟುಂಬಕ್ಕೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್ ಎಫ್) ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಇನ್ನೂ ಹಲವು ಮಂದಿ ಅವಶೇಷದಡಿ ಸಿಲುಕಿಕೊಂಡಿರುವ ಸಾಧ್ಯತೆಯಿದ್ದು ಈ ವರೆಗೂ 13 ಮಂದಿಯ ಮೃತದೇಹ ಪತ್ತೆಯಾಗಿದೆ. ಜತೆಗೆ 13 ಮಂದಿಯನ್ನು ರಕ್ಷಣೆ ಮಾಡಿದ್ದು, ತೀವ್ರವಾಗಿ ಗಾಯಗೊಂಡ ಎಲ್ಲರನ್ನೂ ಭಾವಾನಗರ ಆಸ್ಪತ್ರೆಗೆ ರವಾನಿಸಲಾಗಿದೆ.
ಬುಧವಾರ ರಾತ್ರಿ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇಂದು ಮುಂಜಾನೆ ಮತ್ತೆ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.