ಬೆಂಗಳೂರು, ಆ. 12 (DaijiworldNews/SM): ಗಣೇಶೋತ್ಸವ ಆಚರಣೆ ಸಂಬಂಧಿಸಿದಂತೆ ರಾಜ್ಯ ಸರಕಾರ ಹೊಸ ಗೈಡ್ಲೈನ್ಸ್ ಪ್ರಕಟಿಸಿದೆ. ದೇಗುಲ ಹಾಗೂ ಮನೆಯಲ್ಲಿ ಚತುರ್ಥಿ ಆಚರಿಸಲು ಅವಕಾಶ ಕಲ್ಪಿಸಲಾಗಿದ್ದು, ಕೆಲವು ನಿಬಂಧನೆಗಳನ್ನು ವಿಧಿಸಿದೆ.
ಇನ್ನು ಸಾರ್ವಜನಿಕ ಸ್ಥಳಗಳಲ್ಲಿ ಗಣೇಶನ ಪ್ರತಿಪ್ಠಾಪನೆಗೆ ಅವಕಾಶವಿಲ್ಲ. ಚಪ್ಪರ, ಪೆಂಡಾಲ್, ಶಾಮಿಯಾನ- ವೇದಿಕೆ ನಿರ್ಮಿಸಿ ಮೂರ್ತಿ ಪ್ರತಿಪ್ಠಾಪನೆ ಮಾಡುವಂತಿಲ್ಲ. ಗಣೇಶನ ಮೂರ್ತಿ ತರುವಾಗ ಹಾಗೂ ವಿಸರ್ಜಿಸುವಾಗ ಮೆರವಣಿಗೆ ಅವಕಾಶ ಇಲ್ಲ. ಅಲ್ಲದೆ, ಈ ಸಂದರ್ಭಗಳಲ್ಲಿ ಮನೋರಂಜನಾ ಕಾರ್ಯಕ್ರಮ ಆಯೋಜನೆ ನಿಶೇಧಿಸಲಾಗಿದೆ ಎಂದು ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ಮೊಹರಂ, ಶ್ರೀ ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದುರ್ಗಾ ಪೂಜೆ ಮೊದಲಾದ ಹಬ್ಬ ಆಚರಣೆ ಸಂದರ್ಭದಲ್ಲಿ ಜನದಟ್ಟಣೆ ಮತ್ತು ಒಗ್ಗೂಡುವಿಕೆಗಳನ್ನು ತಡೆಗಟ್ಟಲು ಸ್ಥಳೀಯ ನಿರ್ಬಂಧಗಳನ್ನು ವಿಧಿಸುವಂತೆ ಸಲಹೆ ನೀಡಲಾಗಿದೆ. ಸಾಮಾಜಿಕ, ರಾಜಕೀಯ, ಕ್ರೀಡಾ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಬೃಹತ್ ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ.
ಪೂಜಾ ಸ್ಥಳಗಳು ಮತ್ತಿತರ ಧಾರ್ಮಿಕ ಸ್ಥಳಗಳನ್ನು ತೆರೆಯಲು ಮತ್ತು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿನೊಂದಿಗೆ ಪೂಜಾ ಕಾರ್ಯ ಕೈಗೊಳ್ಳಲು ಅನುಮತಿಸಿದೆ ಆದರೆ, ಜಾತ್ರೆಗಳು, ದೇವಾಲಯದ ಹಬ್ಬಗಳು, ಮೆರವಣಿಗೆ, ಸಭೆ, ಸಮಾರಂಭಗಳಿಗೆ ಅನುಮತಿ ಇರುವುದಿಲ್ಲ. ಅಗತ್ಯವಿದ್ದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ಸಾರ್ವಜನಿಕ ಹಿತದೃಷ್ಟಿಯಿಂದ ಸ್ಥಳೀಯ ನಿರ್ಬಂಧಗಳನ್ನು ವಿಧಿಸುವಂತೆ ಆದೇಶಿಸಲಾಗಿದೆ.