ಬೆಂಗಳೂರು, ಆ 13 (DaijiworldNews/PY): "ಆಗಸ್ಟ್-ಸೆಪ್ಟೆಂಬರ್ 2021ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಹಾಗೂ ದೋಷರಹಿತವಾಗಿ ನಡೆಸಲು ಪ್ರತಿ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ಕುರಿತು ಅಗತ್ಯ ಸಲಹೆ ಸೂಚನೆ ನೀಡಲಾಗಿದೆ" ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.
ಪರೀಕ್ಷೆಗಳು ಆಗಸ್ಟ್ 19ರಿಂದ ಸೆ.3ರವರೆಗೆ ನಡೆಯಲಿದ್ದು, ಈ ಕುರಿತು ಇಂದು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ತಮ್ಮ ವಿಧಾನಸೌಧದ ಕಚೇರಿಯಲ್ಲಿ ಸಭೆ ನಡೆಸಿದ ಅವರು, "ಜಿಲ್ಲಾಧಿಕಾರಿಗಳು ಅಗತ್ಯವಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಒಟ್ಟು 5546 ಕಾಲೇಜುಗಳಿಂದ ಸುಮಾರು ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ" ಎಂದಿದ್ದಾರೆ.
"187 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಕೇಂದ್ರಗಳಲ್ಲಿ ಆ.17ರೊಳಗೆ ಪೂರ್ವಸಿದ್ದತೆ ಆಗಿರುವ ಕುರಿತು ಜಿಲ್ಲಾಧಿಕಾರಿಗಳು ಖಚಿತ ಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ" ಎಂದು ಹೇಳಿದ್ದಾರೆ.
"ಪರೀಕ್ಷೆಗೆ, ಕರ್ನಾಟಕ ಸೆಕ್ಯೂಟರ್ ಎಕ್ಸಾಮಿನೇಷನ್ ಸಿಸ್ಟಮ್ ಪ್ರಕಾರ ಅಗತ್ಯವಾದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಸೂಚನೆ ನೀಡಲಾಗಿದೆ" ಎಂದಿದ್ದಾರೆ.