ವಿಜಯಪುರ, 21 (DaijiworldNews/HR): ಬಿಜೆಪಿ ಸರ್ಕಾರವು ಕೃಷ್ಣಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕೆ ಬದ್ಧವಾಗಿದ್ದು, ಜೊತೆಗೆ ಸಂತ್ರಸ್ತರ ಪುನರ್ವಸತಿ ಕೇಂದ್ರಗಳ ಅಭಿವೃದ್ಧಿಗೆ ನೂರು ಕೋಟಿ ರೂ. ಬಿಡುಗಡೆ ಮಾಡಲಾಗುವುದು" ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಪುನರ್ವಸತಿ ಕೇಂದ್ರಗಳ ಅಭಿವೃದ್ಧಿಗೆ ಈ ಹಿಂದೆ 197 ಕೋಟಿ ರೂ. ಕೋಟಿ ರೂ. ಯೋಜನೆ ರೂಪಿಸಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಇದೀಗ ಇನ್ನೂ ಒಂದು ನೂರು ಕೋಟಿ ರೂ. ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು" ಎಂದು ಭರವಸೆ ನೀಡಿದರು.
ಇನ್ನು ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಶಾಸ್ತ್ರೀ ಜಲಾಶಯದಲ್ಲಿ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಬಾಗಿನ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಉಮೇಶ ಕತ್ತಿ, ಸಚಿವರಾದ ಮುರುಗೇಶ ನಿರಾಣಿ, ಸಿ.ಸಿ.ಪಾಟೀಲ, ಗೋವಿಂದ ಕಾರಜೋಳ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ಮೊದಲಾದವರು ಉಪಸ್ಥಿತರಿದ್ದರು.