ಬೆಂಗಳೂರು, ಆ. 21 (DaijiworldNews/HR): ಒಂದುವರೆ ವರ್ಷದಿಂದ ಸ್ಥಗಿತಗೊಂಡಿದ್ದ 9 ಮತ್ತು 10ನೇ ತರಗತಿ ಹಾಗೂ ಪ್ರಥಮ ಮತ್ತು ದ್ವಿತೀಯ ಪಿ.ಯು ಭೌತಿಕ ತರಗತಿಗಳು ಪುನಾರಂಭಕ್ಕೆ ಶಿಕ್ಷಣ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, "1ನೇ ತರಗತಿಯಿಂದ ದ್ವಿತೀಯ ಪಿಯು ವರೆಗಿನ ಶಿಕ್ಷಣವೂ ಪ್ರತಿಯೊಬ್ಬರ ಜೀವನದಲ್ಲಿ ಅತ್ಯಂತ ಮಹತ್ವದ ಘಟ್ಟ. ಮುಂದಿನ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತದೆ. ಆದರೆ, ಕೊರೊನಾ ಕಾರಣ ಒಂದುವರೆ ವರ್ಷದ ಶೈಕ್ಷಣಿಕ ಅವಧಿಯನ್ನು ಮಕ್ಕಳು ಕಳೆದುಕೊಂಡಿರುವುದು ಬಹಳ ಬೇಸರವಾಗಿದೆ. ಆದರೆ, ಈಗ ಕೋವಿಡ್ ಸುರಕ್ಷತಾ ಕ್ರಮಗಳು, ತ್ವರಿತಗತಿಯ ಲಸಿಕಾಕರಣ, ನಾಗರಿಕರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಿರುವ ಕಾರಣ ಕೋವಿಡ್ ಭೀತಿ ಕಡಿಮೆಯಾಗಿ ಭೌತಿಕ ತರಗತಿಗಳನ್ನು ಪುನಾರಂಭಿಸಲಾಗುತ್ತಿದೆ" ಎಂದಿದ್ದಾರೆ.
ಇನ್ನು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಇಲಾಖೆಯ ಕೊರೊನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಿ ಆ.23ರಿಂದ ಶಾಲೆ ಆರಂಭಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ತರಗತಿ ನಡೆಸಲು ಶಿಕ್ಷಕರಿಗೆ ಸೂಚಿಸಲಾಗಿದೆ ಎಂದರು.
ವಿದ್ಯಾರ್ಥಿಗಳು ಊಟದ ಬಾಕ್ಸ್, ಬಾಟಲಿಯಲ್ಲಿ ಬಿಸಿ ನೀರು ತೆಗೆದುಕೊಂಡು ಹೋಗಬಹುದು. ಶಾಲೆಯಲ್ಲೂ ಬಿಸಿ ನೀರಿನ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಹೇಳಿದರು.