ನವದೆಹಲಿ, ಆ. 26 (DaijiworldNews/SM): ದೇಶದಲ್ಲಿ ಕೋವಿಡ್ ಲಸಿಕೆ ವಿತರಣೆ ಹೆಚ್ಚಳವಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಸರಕಾರ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸುಮಾರು 20 ಕೋಟಿ ಡೋಸ್ ಕೊವಿಶೀಲ್ಡ್ ಲಸಿಕೆ ಪೂರೈಸುವುದಾಗಿ ಉತ್ಪಾದನಾ ಕಂಪೆನಿ ತಿಳಿಸಿದೆ.
ಪುಣೆ ಮೂಲದ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್ಐಐ) ಕಂಪೆನಿ ಆಗಸ್ಟ್ನಲ್ಲಿ 12 ಕೋಟಿ ಡೋಸ್ ಲಸಿಕೆಯನ್ನು ಪೂರೈಸಿದೆ ಎಂದು ಕೇಂದ್ರ ಸರಕಾರಕ್ಕೆ ಮಾಹಿತಿ ನೀಡಿದೆ.
ಕೋವಿಶೀಲ್ಡ್ ಲಸಿಕೆ ಪೂರೈಕೆ ಬಗ್ಗೆ ಎಸ್ಐಐನ ಸರಕಾರಿ ಮತ್ತು ನಿಯಂತ್ರಕ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಮಾಹಿತಿ ನೀಡಿದ್ದಾರೆ. ಆರಂಭದಲ್ಲಿ ಲಸಿಕೆ ಉತ್ಪಾದನೆ ಕಡಿಮೆಯಾಗಿತ್ತು. ಆದರೆ, ಇದೀಗ ಉತ್ಪಾದನೆಯನ್ನು ಹೆಚ್ಚಿಸಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಉತ್ಪಾದಿಸಲಾಗುವುದು ಎಂದು ಕಂಪೆನಿ ಹೇಳಿದೆ.