ಬೆಂಗಳೂರು, ಆ 27 (DaijiworldNews/PY): "ರಾಜ್ಯಕ್ಕೆ ಪ್ರತಿ ದಿನ 5 ಲಕ್ಷ ಡೋಸ್ ಕೊರೊನಾ ಲಸಿಕೆ ಪೂರೈಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
"ರಾಜ್ಯಕ್ಕೆ ಈಗ ಪ್ರತಿ ದಿನ 3.5 ಲಕ್ಷದಿಂದ 4 ಲಕ್ಷ ಲಸಿಕೆ ಪೂರೈಕೆಯಾಗುತ್ತಿದೆ. ಸೆಪ್ಟೆಂಬರ್ ತಿಂಗಳಿನಿಂದ ಪ್ರತಿ ದಿನ 5 ಲಕ್ಷ ಲಸಿಕೆ ಹಾಕಲು ರಾಜ್ಯ ತಯಾರಿ ಮಾಡಿಕೊಳ್ಳುತ್ತಿದೆ ಎನ್ನುವ ವಿಚಾರವನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ಗಮನಕ್ಕೆ ತರಲಾಯಿತು. ಅವರು ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದರು. ರಾಜ್ಯಕ್ಕೆ ಮುಂದಿನ ದಿನಗಳಲ್ಲಿ ಪ್ರತಿದಿನ 5 ಲಕ್ಷ ಡೋಸ್ ಲಸಿಕೆ ನೀಡುವ ಭರವಸೆ ನೀಡಿದ್ದಾರೆ" ಎಂದಿದ್ದಾರೆ.
"ಕೇಂದ್ರ ಸರ್ಕಾರವು, ಕರ್ನಾಟಕದಲ್ಲಿ ಮೆಗಾ ಟೆಕ್ಸ್ಟೈಲ್ ಪಾರ್ಕ್ ಸ್ಥಾಪನೆಗೆ ಒಪ್ಪಿಗೆ ನೀಡಿದೆ. ಕೇಂದ್ರ ಜವಳಿ ಖಾತೆ ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿ ಮಾಡಿದ್ದೆ. ನಂತರ ಕೇಂದ್ರ ಶಿಕ್ಷನ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ಅನುಷ್ಠಾನದ ಕುರಿತು ಚರ್ಚೆ ಮಾಡಿದೆ" ಎಂದು ಹೇಳಿದ್ದಾರೆ.
"ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಯಾರೇ ಆಗಿರಲಿ ಅವರಿಗೆ ಕಠಿಣ ಶಿಕ್ಷೆ ನೀಡುವಂತೆ ಆದೇಶ ನೀಡಿದ್ದೇನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರಾಜಿ ಇಲ್ಲ. ಪ್ರಕರಣದ ತನಿಖಾ ವರದಿಯನ್ನು ನೇರವಾಗಿ ತಮಗೆ ಸಲ್ಲಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ" ಎಂದಿದ್ದಾರೆ.
"ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾ ನಿದೇಶಕ, ಎಡಿಜಿಪಿ ಪ್ರತಾಪ ರೆಡ್ಡಿ ಹಾಗೂ ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರೊಂದಿಗೆ ಮಾತನಾಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರಿಗೆ ಕಾನೂನಾತ್ಮಕವಾಗಿ ಕಠಿಣ ಶಿಕ್ಷೆ ನೀಡುವಂತೆ ಸೂಚಿಸಿದ್ದೇನೆ. ಪ್ರಕರಣದ ತನಿಖೆಗೆ ವಿಶೇಷ ತಂಡವನ್ನು ರಚಿಸಲಾಗಿದೆ. ತನಿಖೆ ಚುರುಕಾಗಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ" ಎಂದು ಹೇಳಿದ್ದಾರೆ.
"ಸುದೀರ್ಘ ಕಾಲದಿಂದ ಸವೋಚ್ಚ ನ್ಯಾಯಾಲಯದಲ್ಲಿ ಬಾಲಿ ಉಳಿದಿರುವ ಜಲ ವಿವಾದಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಶೀಘ್ರವೇ ಇತ್ಯರ್ಥ ಮಾಡಲು ರಾಜ್ಯ ಸರ್ಕಾರ ಎಲ್ಲಾ ರೀತಿಯಾದ ಪ್ರಯತ್ನ ಮಾಡುತ್ತಿದೆ. ಕಾನೂನು ಹಾಗೂ ತಾಂತ್ರಿಕ ತಜ್ಞರೊಂದಿಗೆ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚೆ ನಡೆಸಿದ್ದು, ಸರ್ವೋಚ್ಚ ನ್ಯಾಯಾಲಯಕ್ಕೆ, ಕೃಷ್ಣಾ ಮೇಲ್ದಂಡೆ ಯೋಜನೆ ಹಾಗೂ ತಮಿಳುನಾಡು ಸರ್ಕಾರ ಕೈಗೆತ್ತಿಕೊಂಡಿರುವ ಯೋಜನೆಗಳ ಬಗ್ಗೆ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ" ಎಂದು ತಿಳಿಸಿದ್ದಾರೆ.