ಬೆಂಗಳೂರು, ಸೆ. 01 (DaijiworldNews/PY): "ಹಿಂದೂ ಸಂಘಟನೆಗಳ ಭಾವನೆಗಳನ್ನು ಅರ್ಥೈಸಿಕೊಂಡು ಈ ಬಾರಿ ಗಣೇಶ ಹಬ್ಬ ಆಚರಣೆಗೆ ಅನುಮತಿ ನೀಡಲಿದ್ದೇವೆ" ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣೇಶ ಹಬ್ಬ ಆಚರಿಸಲು ಅವಕಾಶ ಕಲ್ಪಿಸಬೇಕು ಎಂದು ಬಹುತೇಕ ಮಂದಿ ಒತ್ತಾಯಿಸಿದ್ದಾರೆ. ಜನರ ಭಾವನೆಗಳಿಗೆ ಬೆಲೆ ಕೊಡಬೇಕಾದ್ದು ಸರ್ಕಾರದ ಕರ್ತವ್ಯ. ಹಾಗಾಗಿ ಅನುಮತಿ ನೀಡುವುದಾಗಿ ಹೇಳಿದ್ದಾರೆ.
"ಯಾವ ರೀತಿಯಾಗಿ ಗಣೇಶ ಹಬ್ಬವನ್ನು ಆಚರಿಸಬೇಕು, ಎಷ್ಟು ಮಂದಿ ಸೇರಬೇಕು ಎನ್ನುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ ನಿರ್ಧರಿಸಲಿದ್ದಾರೆ" ಎಂದಿದ್ದಾರೆ.
ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ದ ವಾಗ್ದಾಳಿ ನಡೆಸಿದ ಅವರು, "ಸಿದ್ದರಾಮಯ್ಯ ಅವರು ಸುಳ್ಳು ಹೇಳುವುದರಲ್ಲಿ ಮೊದಲಿಗ. ಸಿದ್ದರಾಮಯ್ಯ ಬಾಯಿ ಬಿಟ್ಟರೆ ಹೇಳುವುದೇ ಸುಳ್ಳು. ಸುಳ್ಳು ಹೇಳುವುದಕ್ಕೆ ಒಂದು ಇತಿ-ಮಿತಿ ಬೇಕು. ಯಾರೂ ಕೂಡಾ ಸಿದ್ದರಾಮಯ್ಯ ಅವರ ಮಾತನ್ನು ನಂಬುವುದಿಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಉಸ್ತುವಾರಿ ಸಚಿವ ಅರುಣ್ ಸಿಂಗ್ ಅವರ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೀಡಿದ ಹೇಳಿಕೆ ಬಗ್ಗೆ ತಿರುಗೇಟು ನೀಡಿರುವ ಅವರು, "ದಲ್ಲಾಳಿ ಎನ್ನುವ ಮಾತು ಕುಮಾರಸ್ವಾಮಿ ಅವರ ಬಾಯಲ್ಲಿ ಬರಬಾರದು" ಎಂದಿದ್ದಾರೆ.