ಬೆಂಗಳೂರು, ಸ.03 (DaijiworldNews/HR): ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, "ಒಂದು ಶಿಕ್ಷಣ ನೀತಿಯ ಅನುಷ್ಠಾನವೆಂದರೆ ಸಣ್ಣ ಸಂಗತಿಯೆ? ತಾವೂ ಕೂಡ ಬೆವರಿನ ಸಂಸ್ಕೃತಿಯ ಹಿನ್ನೆಲೆಯ ಸಮುದಾಯದಿಂದ ಬಂದಿದ್ದೀರಿ. ರಾಷ್ಟ್ರಕವಿ ಕುವೆಂಪು ಅವರು ಶಿಕ್ಷಣ, ಅದರ ಗುಣಮಟ್ಟವನ್ನು ಸುಧಾರಣೆ, ಕಲಿಕೆಯ ಮಾಧ್ಯಮ ಹಾಗೂ ಸರ್ಕಾರದ ಜವಾಬ್ಧಾರಿಗಳ ಬಗ್ಗೆ ಮಾತನಾಡಿದ್ದಾರೆ" ಎಂದರು.
ಇನ್ನು "ಮುಂದುವರೆದ ದೇಶಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಸರ್ಕಾರಗಳೇ ನಿರ್ವಹಿಸುತ್ತಿದ್ದು, ಯಾವುದೇ ನಾಡಿನಲ್ಲಿ ಉನ್ನತ ಶಿಕ್ಷಣ ವ್ಯವಸ್ಥೆ ಸಮರ್ಪಕವಾಗಿದ್ದರೆ ಆ ನಾಡಿನ ಸಮಸ್ತ ಆರೋಗ್ಯವೂ ಸರಿಯಾಗಿರುತ್ತದೆ" ಎಂದಿದ್ದಾರೆ.
"ಹೊಸ ಶಿಕ್ಷಣ ನೀತಿಯ ಹೇರಿಕೆಯು ಹಲವು ಸಮಸ್ಯೆಗಳನ್ನು ಒಳಗೊಂಡಿದೆ ಎಂದು ಹೇಳುತ್ತಿದೆ. ಒಕ್ಕೂಟ ವ್ಯವಸ್ಥೆಯ ಮೂಲ ಸ್ಫೂರ್ತಿಯ ನಿರಾಕರಣೆ, ಖಾಸಗೀಕರಣ, ತರಗತಿಗಳನ್ನು ನಿರಾಕರಿಸಿ ಕಾಲೇಜು, ವಿಶ್ವ ವಿದ್ಯಾಲಯಗಳ ಪಾವಿತ್ರ್ಯದ ನಿರಾಕರಣೆ, ಬಡವರು, ಹಿಂದುಳಿದವರು, ದಮನಿತರ ಸಿಗಬಹುದಾದ ಸುಲಭ ಶಿಕ್ಷ,ಣದ ನಿರಾಕರಣೆ, ಕೋಮು ಅಜೆಂಡಾಗಳನ್ನು ತಂದು ಅವೈಜ್ಞಾನಿಕತೆಯನ್ನು, ದ್ವೇಷವನ್ನು ತುಂಬಿ ಭಾರತವನ್ನು ಶಾಶ್ವತ ಅಂಧಕಾರಕ್ಕೆ ತಳ್ಳಲಾಗುತ್ತಿದೆ ಮುಂತಾದ ಗಂಭೀರ ಆರೋಪಗಳಿವೆ" ಎಂದು ಹೇಳಿದ್ದಾರೆ.