ದಾವಣಗೆರೆ, ಸೆ. 04 (DaijiworldNews/PY): "ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡಿದರು, ಮಾಜಿ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಸೈಡ್ ಲೈನ್ ಮಾಡಿದ್ದರು ಎನ್ನುವುದು ಸುಳ್ಳು" ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮುಖ್ಯಮಂತ್ರಿಯಾಗಿದ್ದರಿಂದ ಸಹಜವಾಗಿಯೇ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿಯೇ ಚುನಾವಣೆ ನಡೆಯುತ್ತದೆ. ಹಾಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಯಡಿಯೂರಪ್ಪ ಹಾಗೂ ಜಗದೀಶ್ ಶೆಟ್ಟರ್ ಅವರನ್ನು ಸೈಡ್ ಲೈನ್ ಮಾಡಿದರು ಎಂದು ಅಮಿತ್ ಶಾ ಅವರ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಬಿಂಬಿಸಿವೆ. ಇದು ಸತ್ಯಕ್ಕೆ ದೂರವಾದದ್ದು" ಎಂದು ಹೇಳಿದ್ದಾರೆ.
"ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯಡಿಯೂರಪ್ಪ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊರೊನಾ ಸಂದರ್ಭ ಸೂಕ್ತವಾಗಿ ನಿರ್ವಹಿಸಿದ್ದಾರೆ ಎಂದು ಅಮಿತ್ ಶಾ ತಿಳಿಸಿದ್ದಾರೆ. ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಚುನಾವಣೆ ಎಂದು ಹೇಳಿದ್ದಾರೆ. ಈ ವಿಚಾರವನ್ನು ತಪ್ಪಾಗಿ ಅರ್ಥೈಸುವುದು ಬೇಡ. ಚುನಾವಣೆ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಡೆಯುತ್ತದೆ. ಸಿಎಂ ಆಗಿದ್ದರಿಂದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯುತ್ತದೆ ಎಂದಿದ್ದಾರೆ ಅಷ್ಟೇ. ಪಕ್ಷ ಕಟ್ಟಲು ಬಿಎಸ್ವೈ ಅವರು ದೊಡ್ಡ ಕೊಡುಗೆ ನೀಡಿದ್ದಾರೆ" ಎಂದಿದ್ದಾರೆ.
ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ಎಂ.ಬಿ ಪಾಟೀಲ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಸಿದ್ದರಾಮಯ್ಯ ಅವರ ಸರ್ಕಾರ ಇದ್ದ ಸಂದರ್ಭ ವೀರಶೈವ ಲಿಂಗಾಯತರನ್ನು ಒಡೆಯಲು ಪ್ರಯತ್ನ ಮಾಡಿ ವಿಫಲರಾಗಿದ್ದೀರಿ. ಪ್ರತ್ಯೇಕ ಲಿಂಗಾಯತ ಧರ್ಮ ಎಂದು ಮತ್ತೊಮ್ಮೆ ನಿಮ್ಮ ಬಾಯಲ್ಲಿ ಬರಬಾರದು" ಎಂದು ಹೇಳಿದ್ದಾರೆ.