ಬೆಂಗಳೂರು, ಸೆ. 04 (DaijiworldNews/PY): "ರಾಜ್ಯದಲ್ಲಿ ಆನ್ಲೈನ್ ಜೂಜು ನಿಷೇಧಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದೆ" ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.
ಸಚಿವ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಆನ್ಲೈನ್ ಜೂಜು ನಿಷೇಧ ಸಂಬಂಧ ಚರ್ಚಿಸಲಾಯಿತು. ಈ ಸಂದರ್ಭ, ಆನ್ಲೈನ್ ಗೇಮ್ ನಿಷೇಧಿಸಲು ನಿರ್ಧಾರ ಕೈಗೊಳ್ಳಲಾಗಿದ್ದು, ಈ ಬಗ್ಗೆ ಸರ್ಕಾರ ಸದನದಲ್ಲಿ ತಿದ್ದುಪಡಿ ಕಾಯ್ದೆ ಮಂಡಿಸಲಿದೆ" ಎಂದಿದ್ದಾರೆ.
"ಆನ್ಲೈನ್ ಜೂಜು ನಿಷೇಧಿಸುವಂತೆ ಕೋರಿರುವ ಅರ್ಜಿಯ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್, ಈ ಬಗ್ಗೆ ಸೂಕ್ತವಾದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿತ್ತು. ಹಾಗಾಗಿ ಆನ್ಲೈನ್ ಜೂಜು ನಿಯಂತ್ರಣಕ್ಕೆ ಪೂರಕವಾಗಿ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ" ಎಂದು ತಿಳಿಸಿದ್ದಾರೆ.
"ಹಣ ಹೂಡಿಕೆಯ ಆನ್ಲೈನ್ ಆಟಗಳ ವಿರುದ್ದ ಪೊಲೀಸ್ ಕಾಯ್ದೆಯ ಅಡಿಯಲ್ಲಿ ಕ್ರಮ ಕೈಗೊಳ್ಳಲು ಅವಕಾಶ ಕಲ್ಪಿಸಲು ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು" ಎಂದಿದ್ದಾರೆ.
ಸಾರ್ವಜನಿಕ ಗಣೇಶೋತ್ಸವ ಆಚರಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಈ ವಿಚಾರದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ. ನಾಳೆ ಈ ಸಂಬಂಧ ತಜ್ಞರೊಂದಿಗೆ ಸಭೆ ನಡೆಸಿದ ಬಳಿಕ ಅಂತಿಮ ತೀರ್ಮಾನ ತಿಳಿಸಲಾಗುವುದು" ಎಂದು ಹೇಳಿದ್ದಾರೆ.