ನವದೆಹಲಿ, ಸೆ. 07 (DaijiworldNews/PY): ಪೆಗಾಸಸ್ ಗೂಢಚರ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಂತ್ರವಾಗಿ ತನಿಖೆ ನಡೆಸಲು ಒತ್ತಾಯಿಸಿ ಸಲ್ಲಿಸಿದ್ದ ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಇನ್ನಷ್ಟು ಕಾಲಾವಕಾಶ ನೀಡಿದ್ದು, ಮುಂದಿನ ವಿಚಾರಣೆಯನ್ನು ಸೆ.13ಕ್ಕೆ ನಿಗದಿಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್. ರಮಣ ನೇತೃತ್ವದ ತ್ರಿಸದಸ್ಯ ನ್ಯಾಯಮೂರ್ತಿಗಳ ಪೀಠ, ಸ್ವತಂತ್ರ ತನಿಖೆಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳಿಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ಆ.17ರಂದು ನೋಟಿಸ್ ನೀಡಿತ್ತು.
ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಅನಿರುದ್ದ ಬೋಸ್ ಅವರನ್ನೊಳಗೊಂಡ ಪೀಠದ ಎದುರು ಈ ಅರ್ಜಿ ವಿಚಾರಣೆಗೆ ಬಂದಿದ್ದು, ಈ ಸಂದರ್ಭ ಕೇಂದ್ರ ಸರ್ಕಾರದ ಪರ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೆಲವು ತೊಂದರೆಗಳ ಕಾರಣದಿಂದ ಪೀಠ ಕೋರಿದ ಪ್ರಮಾಣ ಪತ್ರವನ್ನು ಸಲ್ಲಿಸಲು ಆಗಲಿಲ್ಲ. ಹಾಗಾಗಿ, ಈ ಪ್ರಕರಣದ ವಿಚಾರಣೆಯನ್ನು ಗುರುವಾರ ಅಥವಾ ಸೋಮವಾರ ನಡೆಯುವ ವಿಚಾರಣೆ ಪಟ್ಟಿಯಲ್ಲಿ ಸೇರಿಸುವಂತೆ ಮನವಿ ಮಾಡಿದರು.
ಪತ್ರಕರ್ತ ಎನ್. ರಾಮ್ ಪರ ಹಾಜರಿದ್ದ ವಕೀಲ ಕಪಿಲ್ ಸಿಬಲ್ ಅವರು, "ಕೇಂದ್ರದ ಮನವಿಗೆ ಯಾವುದೇ ಆಕ್ಷೇಪ ಇಲ್ಲ" ಎಂದಿದ್ದಾರೆ.
ಪ್ರಕರಣವನ್ನು ಸೋಮವಾರ ವಿಚಾರಣೆ ನಡೆಸುವ ವಿಷಯಗಳ ಪಟ್ಟಿಗೆ ಸೇರಿಸಲು ನ್ಯಾಯಪೀಠ ಸೂಚನೆ ನೀಡಿದೆ.