ಬೆಂಗಳೂರು, ಸ. 13 (DaijiworldNews/HR): ಹಿರಿಯ ಕಾಂಗ್ರೆಸ್ಸಿಗ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ (80) ಸೋಮವಾರ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ನಗರದ ಯೆನಪೋಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕಾಂಗ್ರೆಸ್ಸಿಗ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.
ಫರ್ನಾಂಡಿಸ್ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಸರಳ,ಸಜ್ಜನಿಕೆಯ ವ್ಯಕ್ತಿತ್ವದ ಆಸ್ಕರ್ ಕಾರ್ಯಕರ್ತರ ನಾಯಕರಾಗಿದ್ದರು. ಆಸ್ಕರ್ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿಕೋರುತ್ತೇನೆ" ಎಂದು ಹೇಳಿದ್ದಾರೆ.
ಇನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿ, "ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ರಾಷ್ಟ್ರ ಮಟ್ಟದಲ್ಲಿ ತಮ್ಮ ಛಾಪನ್ನು ಬೆಳೆಸಿಕೊಂಡಿದ್ದ ಅವರು, ಸರಳ ಸಜ್ಜನ ನಾಯಕರಾಗಿ ಗುರುತಿಸಿಕೊಂಡಿದ್ದರು. ದೇವರು ಅವರಿಗೆ ಸದ್ಗತಿ ನೀಡಲಿ, ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, "ರಾಜ್ಯಸಭಾ ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಆಸ್ಕರ್ ಫರ್ನಾಂಡಿಸ್ ರವರು ಇಂದು ನಮ್ಮನ್ನೆಲ್ಲ ಅಗಲಿರುವುದು ನನಗೆ ಬಹಳ ದುಃಖ ಉಂಟು ಮಾಡಿದ್ದು, ಅವರ ಆತ್ಮಕ್ಕೆ ಚಿರ ಶಾಂತಿ ಸಿಗಲೆಂದು ಕೋರುತ್ತೇನೆ. ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೆ ಕರುಣಿಸಲೆಂದು ಪ್ರಾರ್ಥಿಸುತ್ತೇನೆ" ಎಂದಿದ್ದಾರೆ.
ಇನ್ನು ಫರ್ನಾಂಡಿಸ್ ಅವರ ನಿಧನಕ್ಕೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಶೋಕ ವ್ಯಕ್ತಪಡಿಸಿದ್ದು, ಭಗವಂತ ಅವರ ಆತ್ಮಕ್ಕೆ ಶಾಂತಿ ಕೊಡಲಿ. ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.