ಕೋಲ್ಕತ್ತಾ, ಸೆ 20 (DaijiworldNews/MS): ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು 2024 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ಹುದ್ದೆಯ ಮುಂಚೂಣಿಯಲ್ಲಿದ್ದಾರೆ ಎಂದು ಬಿಜೆಪಿ ತೊರೆದು ಟಿಎಂಸಿ ಸೇರಿದ್ದ ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಹೇಳಿದ್ದಾರೆ.
ತಮ್ಮ ರಾಜಕೀಯ ವೃತ್ತಿಜೀವನವನ್ನು ಮುಂದುವರಿಸಲು ಬಿಜೆಪಿ ಪಕ್ಷವನ್ನು ತೊರೆಯುವ ಮತ್ತು ತೃಣಮೂಲ ಕಾಂಗ್ರೆಸ್ (TMC) ಗೆ ಸೇರುವ ನಿರ್ಧಾರಕ್ಕಾಗಿ ಪ್ರತಿಕ್ರಿಯಿಸಿದ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭವಿಷ್ಯದಲ್ಲಿ ಭಾರತದ ಮುಖವಾಗಬಹುದು ಎಂದು ಹೇಳಿದ್ದಾರೆ.
ನಮ್ಮ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ 2024 ರಲ್ಲಿ ಪ್ರಧಾನಿಯಾಗಬೇಕೆಂದು ನಾನು ಬಯಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷವೂ ಪ್ರಮುಖ ಪಾತ್ರ ವಹಿಸುತ್ತದೆ. ಮಮತಾ ಬ್ಯಾನರ್ಜಿ ಪ್ರಧಾನಿ ಹುದ್ದೆಯ ಸ್ಪರ್ಧೆಯ ಅಗ್ರಗಣ್ಯ ಸ್ಥಾನದಲ್ಲಿದ್ದಾರೆ ಎಂಬ ಅಂಶವನ್ನು ಯಾರೂ ಅಲ್ಲಗಳೆಯುವಂತಿಲ್ಲ ಎಂದು ಪ್ರತಿಪಾದಿಸಿದ್ದಾರೆ.
ಮಾಜಿ ಕೇಂದ್ರ ಸಚಿವ, ಮಾಜಿ ಸಂಸದ ಬಾಬುಲ್ ಸುಪ್ರಿಯೋ ಶನಿವಾರ ಅಧಿಕೃತವಾಗಿ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಎರಡು ತಿಂಗಳ ಹಿಂದೆಯಷ್ಟೇ ಕೇಂದ್ರ ಪರಿಸರ ಖಾತೆ ರಾಜ್ಯ ದರ್ಜೆ ಸಚಿವರಾಗಿದ್ದ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿತ್ತು. ಹೀಗೆ ಕೇಂದ್ರ ಸಚಿವ ಸ್ಥಾನ ಕಳೆದುಕೊಂಡಿದ್ದ ಅವರು, ತಿಂಗಳ ಹಿಂದೆ ಪ್ರತಿಕ್ರಿಯೆ ನೀಡಿ , ಯಾವುದೇ ಪಕ್ಷಕ್ಕೆ ಹೋಗುವುದಿಲ್ಲ ಎಂದಿದ್ದರು. ಆ ಬಳಿಕ ಟಿಎಂಸಿ ಸೇರ್ಪಡೆಯಾಗಿದ್ದರು.