ಬೆಂಗಳೂರು, ಸೆ 21(DaijiworldNews/MS): ರಾಜ್ಯದ ಇತಿಹಾಸದಲ್ಲೇ ಮೊತ್ತಬಾರಿಗೆ ಕೃಷಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ರೈತರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದ್ದು, ಮುಂದಿನ ವರ್ಷದಿಂದ ಇದು ಜಾರಿಗೆ ಬರಲಿದೆ ಎಂದು ಬೆಂಗಳೂರು ಕೃಷಿ ವಿವಿ ಕುಲಪತಿ ಡಾ.ಎಸ್. ರಾಜೇಂದ್ರ ಪ್ರಸಾದ್ ಹೇಳಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಕುಲಪತಿ ಡಾ.ಎಸ್. ರಾಜೇಂದ್ರ ಪ್ರಸಾದ್, ಈ ವರ್ಷವೇ ಅಂದರೆ ಸೆ. 21 ರಂದು ನಡೆಯುವ 55 ನೇ ಘಟಿಕೋತ್ಸವದಲ್ಲಿಯೇ ಗೌರವ ಡಾಕ್ಟರೇಟ್ ಪದವಿಗಾಗಿ ರೈತರನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸಾಧಕರನ್ನು ಗುರುತಿಸುವುದು ಸಾಧ್ಯವಾಗಲಿಲ್ಲ. ಹೀಗಾಗಿ ಮುಂದಿನ ವರ್ಷದಿಂದ ರೈತರೊಬ್ಬರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು. ಕೃಷಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ರೈತರೊಬ್ಬರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ.
ಮುಂದಿನ ವರ್ಷ ನಡೆಯುವ 56ನೇ ಘಟಿಕೋತ್ಸವದಲ್ಲಿ ರೈತರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು. ಕೃಷಿ ಕ್ಷೇತ್ರದಲ್ಲಿ ಹೊಸ ಆವಿಷ್ಕಾರ ಮಾಡುವ, ವರಮಾನ ಗಳಿಕೆಯ ಹೊಸ ಮಾರ್ಗ ತೋರಿಸುವ ಪ್ರಗತಿಪರ ರೈತರನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ವಿಶ್ವ ವಿದ್ಯಾಲಯ ಕುಲಪತಿ ಡಾ. ಎಸ್. ರಾಜೇಂದ್ರ ಪ್ರಸಾದ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.