ನವದೆಹಲಿ, ಸೆ. 21 (DaijiworldNews/SM): ಅಫ್ಘಾನಿಸ್ತಾನ ತಾಲಿಬಾನ್ ವಶವಾದ ಬಳಿಕ ಹಲವು ರಾಷ್ಟ್ರಗಳು ಕಳವಳ ವ್ಯಕ್ತಪಡಿಸಿವೆ. ಆಫ್ಘಾನಿಸ್ತಾನದಲ್ಲಿನ ಹಾಲಿ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್ ಅವರು ಚರ್ಚೆ ನಡೆಸಿದ್ದಾರೆ. ಭಯೋತ್ಪಾದನೆ ಬಗ್ಗೆ ಇಬ್ಬರು ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ದೂರವಾಣಿ ಮೂಲಕ ಮಂಗಳವಾರ ಮತುಕತೆ ನಡೆಸಿದ್ದಾರೆ. ಮಾತುಕತೆ ಸಂದರ್ಭದಲ್ಲಿ ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಅಲ್ಲದೆ ಭಯೋತ್ಪಾದನೆ, ಮಾದಕ ದ್ರವ್ಯ, ಅಕ್ರಮ ಶಸ್ತ್ರಾಸ್ತ್ರ ಮತ್ತು ಮಾನವ ಕಳ್ಳಸಾಗಣೆ ಸಾಧ್ಯತೆಯ ಬಗ್ಗೆಯೂ ಉಭಯ ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ಖಾತೆ ಮೂಲಕ ಹಂಚಿಕೊಂಡಿದ್ದಾರೆ.
ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಹೆಚ್ಚುತ್ತಿರುವ ದ್ವಿಪಕ್ಷೀಯ ಸಹಯೋಗವನ್ನು ಉಭಯ ನಾಯಕರು ಪರಿಶೀಲಿಸಿದ್ದಾರೆ. ಅಲ್ಲದೆ, ಅಧ್ಯಕ್ಷ ಮ್ಯಾಕ್ರನ್ ಮತ್ತು ಪ್ರಧಾನಿ ಮೋದಿ ಅವರು ಇಂಡೋ-ಪೆಸಿಫಿಕ್ನಲ್ಲಿ ಜಂಟಿಯಾಗಿ ಮತ್ತು ಯುರೋಪಿನೊಂದಿಗೆ ಕಾರ್ಯನಿರ್ವಹಿಸಲು ಒಪ್ಪಿಕೊಂಡಿದ್ದಾರೆ.