ಬೆಂಗಳೂರು, ಸೆ 24 (DaijiworldNews/MS): ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡುವುದರ ಬಗ್ಗೆ ನಿಗಮದ ಆರ್ಥಿಕ ಪರಿಸ್ಥಿತಿ ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಹೀಗಾಗಿ ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ವಿಧಾನಪರಿಷತ್ನಲ್ಲಿಂದು ಜೆಡಿಎಸ್ನ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ನೀಡಲು ನಮಗೂ ಆಸೆ ಇದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ, ಕೋವಿಡ್ ನಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಆರ್ಥಿಕ ಸಮಸ್ಯೆಯಲ್ಲಿದೆ. ಹೀಗಾಗಿ ಸಿಎಂ ಜೊತೆ ಚರ್ಚಿಸಿ ಈ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.
ಸಚಿವರ ಉತ್ತರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮರಿತಿಬ್ಬೇಗೌಡ ಅವರು, ಸೇವಾ ಸಿಂಧು ಅಪ್ಲಿಕೇಷನ್ ಯಾರಿಗೋ ಲಾಭ ಮಾಡುವ ಸಲುವಾಗಿ ಇದೆ. ಅದರಲ್ಲಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು 150 ರೂ. ಪಾವತಿಸಬೇಕು. ಕಚೇರಿಗೆ ಅಲೆಯಬೇಕು. ಪ್ರತಿ ವರ್ಷ ಪಾಸ್ ನವೀಕರಣಕ್ಕೆ ಹೊಸ ಪ್ರಕ್ರಿಯೆಗಳನ್ನೇ ಪಾಲನೆ ಮಾಡಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಸೇವಾ ಸಿಂಧೂ ಮೂಲಕ 1 ಲಕ್ಷ ವಿದ್ಯಾರ್ಥಿಗಳು ಬಸ್ ಪಾಸ್ ಪಡೆದುಕೊಂಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಇಂಟರ್ ನೆಟ್ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಹಳೆಯ ವ್ಯವಸ್ಥೆ ಜಾರಿ ಮಾಡಲಾಗುವುದು ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.