ಗಾಜಿಯಾಬಾದ್, ಸೆ.24 (DaijiworldNews/PY): ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್ಗೆ ಭೇಟಿ ನೀಡುವ ಸಂದರ್ಭ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ ಅಮೇರಿಕಾದಲ್ಲಿ ವಾಸಿಸುತ್ತಿರುವ ಭಾರತೀಯರಿಗೆ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮನವಿ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಭೇಟಿ ಸಂದರ್ಭ ಪ್ರತಿಭಟನೆ ನಡೆಸುವ ಮುಖೇನ 10 ತಿಂಗಳಿನಿಂದ ಕೃಷಿ ಕಾಯ್ದೆಗಳ ವಿರುದ್ದ ಹೋರಾಟ ನಡೆಸುತ್ತಿರುವ ರೈತ ಒಕ್ಕೂಟಗಳ ಬೆಂಬಲಕ್ಕೆ ನಿಲ್ಲುವಂತೆ ಮನವಿ ಮಾಡಿದ್ದಾರೆ.
ಪ್ರಧಾನಿ ಮೋದಿ ಅವರನ್ನು ಭೇಟಿಯಾಗುವ ವೇಳೆ, ಭಾರತೀಯ ರೈತರ ಕಾಳಜಿಯ ಬಗ್ಗೆ ಗಮನಹರಿಸುವಂತೆ ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ಅವರನ್ನು ಒತ್ತಾಯಿಸಿದ್ದಾರೆ.
"ಹೊಸ ಕೃಷಿ ಕಾನೂನುಗಳ ವಿರುದ್ಧದ ಹೋರಾಟದಲ್ಲಿ 750 ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಕಾಯ್ದೆಗಳನ್ನು ರದ್ದುಗೊಳಿಸಲು ಸಿದ್ಧವಿಲ್ಲ" ಎಂದಿದ್ದಾರೆ.
"ಅಮೇರಿಕಾದಲ್ಲಿ ವಾಸಿಸುತ್ತಿರುವ ಎಲ್ಲಾ ಭಾರತೀಯರಲ್ಲಿ ಮನವಿ ಮಾಡುತ್ತಿದ್ದೇವೆ. ಸೆ.25ರಂದು ನ್ಯೂಯಾರ್ಕ್ನಲ್ಲಿ ನಡೆಯಲಿರುವ ಕಾರ್ಯಕ್ರಮವೊಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. ಈ ಸಂದರ್ಭ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಬೇಕು" ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಕೇಶ್ ಟಿಕಾಯತ್, "ಪ್ರೆಸಿಡೆಂಡ್ ಆಫ್ ಯುಎಸ್, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಅನುಷ್ಠಾನಕ್ಕೆ ತಂದ ಮೂರು ಕೃಷಿ ಕಾಯ್ದೆಗಳ ವಿರುದ್ದ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. 11 ತಿಂಗಳಲ್ಲಿ700 ರೈತರು ಸಾವನ್ನಪ್ಪಿದ್ದಾರೆ. ನಮ್ಮನ್ನು ರಕ್ಷಿಸಲು ಈ ಕಾನೂನುಗಳನ್ನು ಹಿಂಪಡೆಯಬೇಕು. ಪ್ರಧಾನಿ ಮೋದಿಯವರನ್ನು ಭೇಟಿ ಮಾಡುವಾಗ ಈ ವಿಚಾರದ ಬಗ್ಗೆ ತಿಳಿಸಿ" ಎಂದಿದ್ದಾರೆ.