ಬೆಂಗಳೂರು, ಸೆ.27 (DaijiworldNews/PY): ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆಗೆ ಮುಂದಾದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಬೆಂಗಳೂರಿನ ಮೌರ್ಯ ಸರ್ಕಲ್ನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ಗೆ ರಾಜ್ಯದ ರೈತ ಸಂಘಟನೆಗಳು ಬೆಂಬಲ ನೀಡಿವೆ.
ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ತಲೆಯ ಮೇಲೆ ಗೋಣಿಚೀಲ ಹಾಕಿಕೊಂಡು ಧರಣಿ ನಡೆಸುತ್ತಿದ್ದು, ಪ್ರತಿಭಟನೆಗೆ ಮುಂದಾಗಿದ್ದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆಯುವ ವಿಚಾರದ ಬಗ್ಗೆ ಪೊಲೀಸ್ ಹಾಗೂ ಪ್ರತಿಭಟನಾಕಾರರ ಮಧ್ಯೆ ವಾಗ್ವಾದ ನಡೆದಿದ್ದು, ಸದ್ಯ ರಸ್ತೆ ತಡೆಯದೆ ರ್ಯಾಲಿ ನಡೆಸಲು ಪೊಲೀಸರು ಅನುಮತಿ ನೀಡಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಚಿತ್ರದುರ್ಗ ಸೇರಿದಂತೆ ಕೊಪ್ಪಳ, ಹಾಸನ ಚಿತ್ರದುರ್ಗ, ಮೈಸೂರು ಹಾಗೂ ಹಲವು ಜಿಲ್ಲೆಗಳಲ್ಲಿ ರೈತ ಸಂಘಟನೆಗಳು ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದಾರೆ.