ಬೆಂಗಳೂರು, ಸೆ. 28 (DaijiworldNews/SM): ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಪೂಜಾ ಕೈಂಕರ್ಯ ನೆರವೇರಿಸಲು ರಾಜ್ಯ ಸರಕಾರ ಹೊರಡಿಸಿದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ದತ್ತಾತ್ರೇಯ ಪೀಠದ ಪೂಜಾ ಕೈಂಕರ್ಯ ನೆರವೇರಿಸಲು ಮುಜಾವರ್ ನೇಮಕ ಮಾಡಿ 2018ರ ಮಾರ್ಚ್ 19ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಈ ಆದೇಶ ನೀಡಿತ್ತು. ಇದರ ವಿರುದ್ಧ ಶ್ರೀಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ 2018ರ ಏಪ್ರಿಲ್ ನಲ್ಲಿ ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿತ್ತು. ಅರ್ಜಿ ಕುರಿತು ಸುದೀರ್ಘ ವಾದ-ಪ್ರತಿವಾದ ನಡೆಸಲಾಗಿದೆ. ಇದೀಗ ವಿಚಾರಣೆ ಪೂರ್ಣಗೊಂಡಿದೆ.
ಇನ್ನು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೀಡಿರುವ ನಿರ್ದೇಶನವನ್ನು ಸ್ವಾಗತಿಸಿದ ಕನ್ನಡ ಮತ್ತು ಸಂಸ್ಕೃತಿಕ ಸಚಿವ ಸುನೀಲ್ ಕುಮಾರ್ ಅವರು, ಹಿಂದೂಗಳ ಶ್ರದ್ಧಾಕೇಂದ್ರವಾದ ಚಿಕ್ಕಮಗಳೂರಿನ ಐತಿಹಾಸಿಕ ದತ್ತಾತ್ರೇಯ ಪೀಠ ಕುರಿತಂತೆ ಇವತ್ತು ಘನ ನ್ಯಾಯಾಲಯ ವಿಶೇಷ ತೀರ್ಪು ಕೊಟ್ಟಿದೆ. ಇದನ್ನು ನಾನು ಸ್ವಾಗತಿಸುತ್ತೇನೆ ಎಂದಿದ್ದಾರೆ. ಮುಂದೆ ಹಿಂದೂ ಅರ್ಚಕರ ನೇಮಕಗೊಳಿಸುವ ಕುರಿತಂತೆ ನಿರ್ಧಾರ ಪ್ರಕಟಿಸಲಾಗುವುದೆಂದು ಅವರು ತಿಳಿಸಿದ್ದಾರೆ.