ಬೆಂಗಳೂರು, ಅ 02 (DaijiworldNews/MS): "ಗಾಂಧಿಯವರು ಸತ್ಯ ಮತ್ತು ಅಹಿಂಸೆಯ ಮಾರ್ಗ ತೋರಿದ್ದರೆ, ಭಾರತೀಯ ಜನತಾ ಪಕ್ಷ ಅಸತ್ಯ ಮತ್ತು ಹಿಂಸೆಯ ಹಾದಿಯಲ್ಲಿ ಸಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾತು ಮತ್ತು ಕೃತಿಗಳೆರಡು ತದ್ವಿರುದ್ಧವಾಗಿದೆ. ಮೋದಿ ಅವರು ಯಾವುದನ್ನು ಉಳಿಸುತ್ತೇನೆ ಎನ್ನುತ್ತಾರೋ ಅದನ್ನು ನಾಶ ಮಾಡಲು ಹೊರಟಿದ್ದಾರೆ" ಎಂದರ್ಥ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಪಕ್ಷ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಕಿಡಿಕಾರಿದ್ದಾರೆ.
ಈ ಬಗ್ಗೆ ಸರಣಿ ಟ್ವಿಟ್ ಮಾಡಿದವರು, " ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದೆ.ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ , ಮಾಜಿ ಮುಖ್ಯಮಂತ್ರಿಗಳಾದ ವಿರಪ್ಪ ಮೊಯಿಲಿ ಸೇರಿದಂತೆ ಹಲವರು ಮಂದಿ ಭಾಗವಹಿಸಿದ್ದರು ಎಂದು ಹೇಳಿದ ಅವರು ಬಳಿಕ ಸರಣಿ ಟ್ವಿಟ್ ಮಾಡಿ ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.
ಮಹಾತ್ಮ ಗಾಂಧೀಜಿಯವರು ಭಾರತಕ್ಕಷ್ಟೇ ಸೀಮಿತವಾಗಿರದೆ, ವಿಶ್ವನಾಯಕರಾಗಿದ್ದಾರೆ. ನಮ್ಮದೇ ದೇಶದ ಕೇಂದ್ರ ಸರ್ಕಾರ ಗಾಂಧಿ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವ, ಅವರ ಬಗ್ಗೆ ಹಗುರಾಗಿ ಮಾತನಾಡುವ ಮೂಲಕ ಮಹಾನ್ ವ್ಯಕ್ತಿಗೆ ಅಪಮಾನ ಮಾಡುತ್ತಿದೆ. ಗಾಂಧಿಯವರು ಸತ್ಯ ಮತ್ತು ಅಹಿಂಸೆಯ ಮಾರ್ಗ ತೋರಿದ್ದರೆ, ಭಾರತೀಯ ಜನತಾ ಪಕ್ಷ ಅಸತ್ಯ ಮತ್ತು ಹಿಂಸೆಯ ಹಾದಿಯಲ್ಲಿ ಸಾಗುತ್ತಿದೆ. ನರೇಂದ್ರ ಮೋದಿಯವರ ಮಾತು ಮತ್ತು ಕೃತಿಗಳೆರಡು ತದ್ವಿರುದ್ಧವಾಗಿದೆ. ಮೋದಿ ಅವರು ಯಾವುದನ್ನು ಉಳಿಸುತ್ತೇನೆ ಎನ್ನುತ್ತಾರೋ ಅದನ್ನು ನಾಶ ಮಾಡಲು ಹೊರಟಿದ್ದಾರೆ ಎಂದರ್ಥ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾತ್ಮ ಗಾಂಧಿಯವರ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಬಿಜೆಪಿಯವರು ದೇಶಭಕ್ತ ಎಂದು ಕರೆಯುತ್ತಾರೆ. ಬಿಜೆಪಿಯವರ ರಕ್ತದಾಹಿ, ವಿದ್ವಂಸಕ ಮನಸ್ಥಿತಿಗೆ ಇದಕ್ಕಿಂತ ಬೇರೆ ಉದಾಹರಣೆ ಬೇಕೆ? ಇಂತಹ ಪಕ್ಷ ಅಧಿಕಾರದಲ್ಲಿ ಇದ್ದರೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಉಳಿಯಲು ಹೇಗೆ ಸಾಧ್ಯ? ಕಳೆದು ಹತ್ತು ತಿಂಗಳುಗಳಿಂದ ರೈತರು ದೇಶಾದ್ಯಂತ ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಮಾತುಕತೆಯ ಬದಲು, ಕ್ರೌರ್ಯ ಮತ್ತು ಬಲಪ್ರಯೋಗದ ಮೂಲಕ ಅವರ ಹೋರಾಟವನ್ನು ಅಂತ್ಯಗೊಳಿಸಲು ಹೊರಟಿದೆ ಎಂದು ಆರೋಪಿಸಿದ್ದಾರೆ.