ಮುಂಬೈ, ಅ.03 (DaijiworldNews/PY): ಐಷಾರಾಮಿ ಹಡಗಿನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದಿ ಎನ್ಸಿಬಿ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ ಮಾಡುತ್ತಿರುವ ಆಧಾರದ ಮೇಲೆ ಶನಿವಾರ ರಾತ್ರಿ ಮಹಾರಾಷ್ಟ್ರದ ಎನ್ಸಿಬಿ ಅಧಿಕಾರಿಗಳು ಪ್ರಯಾಣಿಕರ ಕ್ರೂಸ್ ಹಡಗಿನ ಮೇಲೆ ದಾಳಿ ನಡೆಸಿದ್ದರು.
ಹಡಗಿನಲ್ಲಿ ನೂರಾರು ಮಂದಿ ಪ್ರಯಾಣಿಕರಿದ್ದು, ಗೋವಾ ಕಡೆ ಸಾಗುವುದಿತ್ತು. ಹಡಗಿನಲ್ಲಿ ಪಾರ್ಟಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ತಿಳಿದ ಎನ್ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ನೇತೃತ್ವದಲ್ಲಿ ಎನ್ಸಿಬಿ ತಂಡ ಹಡಗಿನಲ್ಲಿ ಶೋಧ ಕಾರ್ಯ ನಡೆಸಿದ್ದರು. ಈ ಸಂದರ್ಭ ಹಡಗಿನಲ್ಲಿ ಆರ್ಯನ್ ಖಾನ್ ಕೂಡಾ ಪತ್ತೆಯಾಗಿದ್ದರು.
"ಕೆಲವು ಪ್ರಯಾಣಿಕರಿಂದ ನಿಷೇಧಿಕ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಡಗಿನಿಂದ ಯಾವುದೇ ಪ್ರಯಾಣಿಕರಿಗೆ ಹೊರಗೆ ಹೋಗಲು ಅವಕಾಶ ನೀಡಿಲ್ಲ. ಆರ್ಯನ್ ಖಾನ್ ಅವರನ್ನು ಕೂಡಾ ವಿಚಾರಣೆ ನಡೆಸಲಾಗಿದೆ. ಆದರೆ, ಡ್ರಗ್ಸ್ ಬಳಕೆ ಮಾಡಿದ್ದಾರೋ ಅಥವಾ ಇಲ್ಲವೋ ಎನ್ನುವ ಬಗ್ಗೆ ಇನ್ನೂ ಖಚಿತವಾಗಿಲ್ಲ" ಎಂದು ಎನ್ಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
"ದಾಳಿಯ ಸಂದರ್ಭ ಕೆಲವು ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ತನಿಖೆ ಪ್ರಗತಿಯಲ್ಲಿದ್ದು, 8-10 ಮಂದಿಯನ್ನು ವಿಚಾರಣೆಗೆ ಒಳಪಡಿಸಿದ್ದೇವೆ" ಎಂದು ತಿಳಿಸಿದ್ದಾರೆ.