ಲಖೀಂಪುರ, ಅ.04 (DaijiworldNews/HR): ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದಲ್ಲಿ ಸಾವನ್ನಪ್ಪಿದ ನಾಲ್ವರು ರೈತರ ಕುಟುಂಬಕ್ಕೆ ಸರಕಾರದ ವತಿಯಿಂದ 45ಲಕ್ಷ ರೂಪಾಯಿ ಪರಿಹಾರ ಧನ ಮತ್ತು ಕುಟುಂಬ ಸದಸ್ಯರಿಗೆ ಸರಕಾರಿ ಉದ್ಯೋಗ ನೀಡಲಾಗುವುದು ಎಂದು ಉತ್ತರಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಶಾಂತ್ ಕುಮಾರ್, "ಹಿಂಸಾಚಾರದ ಕುರಿತು ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು. ರೈತರ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗುವುದು" ಎಂದರು.
ಇನ್ನು ಹಿಂಸಾಚಾರದ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೇಸರ ಪಡಿಸಿದ್ದು, ಈ ಘಟನೆಗೆ ಕಾರಣೀಕರ್ತರಾದ ಯಾವುದೇ ವ್ಯಕ್ತಿಯಿರಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ" ಎಂದಿದ್ದಾರೆ.
ಲಖೀಂಪುರ ಖೇರಿಯಲ್ಲಿ ಭಾನುವಾರ ಪ್ರತಿಭಟನಕಾರ ರೈತರು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ 8 ಮಂದಿ ಸಾವಿಗೀಡಾಗಿದ್ದು, ಹಲವರು ಗಾಯ ಗೊಂಡಿದ್ದರು. ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.